ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಇದೇ 25 ರಿಂದ ಜುಲೈ 4ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯಲು ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅವಕಾಶ ಕಲ್ಪಿಸಿದೆ.
ಈ ‘ಉಚಿತ ಪ್ರಯಾಣ’ದ ಮಾಹಿತಿಯನ್ನು ಹೆಚ್ಚು ವಿದ್ಯಾರ್ಥಿಗಳಿಗೆ ತಲುಪಿಸುವ ಸಲುವಾಗಿ ಬಿಎಂಟಿಸಿ ‘ಹಾಲ್ ಟಿಕೆಟ್ ತೋರಿಸಿ, ಉಚಿತವಾಗಿ ಪ್ರಯಾಣಿಸಿ’ ಎಂಬ ಘೋಷಣೆಯಿರುವ ಪೋಸ್ಟರ್ ಸಿದ್ಧಪಡಿಸಿದೆ. ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಎರಡು ಭಾಷೆಗಳಲ್ಲಿರುವ ಈ ಪೋಸ್ಟರ್‌ಗಳನ್ನು ಬಿಎಂಟಿಸಿ ಸೋಮವಾರ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಸಂಚರಿಸಬಹುದು. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ (ಹಾಲ್ ಟಿಕೆಟ್) ಜತೆಗೆ, ವಿದ್ಯಾರ್ಥಿ ಸ್ಮಾರ್ಟ್ ಕಾರ್ಡ್ ತೋರಿಸಿದರೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಲಾಕ್ ಡೌನ್ ಕಾರಣದಿಂದಾಗಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಲಾಗಿತ್ತು. ಮಾರ್ಚ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಜೂನ್‌ನಲ್ಲಿ ಆರಂಭವಾಗುತ್ತಿವೆ. ಬೆಂಗಳೂರು ನಗರದಲ್ಲಿ ಮೆಟ್ರೊ ಸೇವೆ ಸ್ಥಗಿತಗೊಂಡಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್, ಖಾಸಗಿ ವಾಹನ ಅವಲಂಬಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬಿಎಂಟಿಸಿ ಇಂಥದ್ದೊಂದು ‘ಉಚಿತ ಪ್ರಯಾಣ’ದ ಅವಕಾಶ ಕಲ್ಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.