ADVERTISEMENT

ಬೆಂಗಳೂರು | ಮತ್ತೆ ಎರಡು ಠಾಣೆಗಳು ಕಮಿಷನರೇಟ್ ವ್ಯಾಪ್ತಿಗೆ: ಪ್ರಸ್ತಾವ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 15:47 IST
Last Updated 21 ಆಗಸ್ಟ್ 2025, 15:47 IST
 ಸೀಮಂತ್ ಕುಮಾರ್ ಸಿಂಗ್
 ಸೀಮಂತ್ ಕುಮಾರ್ ಸಿಂಗ್   

ಬೆಂಗಳೂರು: ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಇನ್ನೂ ಎರಡು ಪೊಲೀಸ್ ಠಾಣೆಗಳನ್ನು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ ಮಾಡಲು ಸಿದ್ಧತೆ ನಡೆದಿದೆ.

ಹೊರ ವಲಯದ ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳನ್ನು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರಿಗೆ ನಗರ ಪೊಲೀಸ್ ಕಮಿಷನರ್‌ ಸೀಮಂತ್ ಕುಮಾರ್ ಸಿಂಗ್ ಪ್ರಸ್ತಾವ ಸಲ್ಲಿಸಿದ್ದಾರೆ.

ಗ್ರಾಮಾಂತರ ವ್ಯಾಪ್ತಿಯಲ್ಲಿರುವ ರಾಜಾನುಕುಂಟೆ ಹಾಗೂ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಗಳ 40 ಹಳ್ಳಿಗಳು ಈಗಾಗಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಇವೆ. ಹೊರವಲಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧಗಳಿಗೆ ಕಡಿವಾಣ ಹಾಕಲು ಈ ಠಾಣೆಗಳನ್ನು ಕಮಿಷನರೇಟ್ ವ್ಯಾಪ್ತಿಗೆ ಸೇರಿಸಬೇಕು ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ರಾಜಾನುಕುಂಟೆ ಠಾಣೆ ವ್ಯಾಪ್ತಿಯಲ್ಲಿ ಕಾಲೇಜುಗಳು ಹೆಚ್ಚಿವೆ. ವಿದೇಶಿ ಪ್ರಜೆಗಳು ಹೆಚ್ಚಾಗಿ ವಾಸ ಮಾಡುತ್ತಿದ್ದು, ಮನೆಗಳ್ಳತನ ಮತ್ತು ಡ್ರಗ್ಸ್‌ ಮಾರಾಟ ದಂಧೆಯೂ ನಡೆಯುತ್ತಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಜನದಟ್ಟಣೆ, ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳು, ವಸತಿ ಸಮುಚ್ಚಯಗಳಿವೆ. ಈ ಠಾಣೆಯನ್ನು ನಗರ ವ್ಯಾಪ್ತಿಗೆ ಸೇರ್ಪಡೆ ಮಾಡಿದರೆ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ತ್ವರಿತವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಅನುಕೂಲ ಆಗಲಿದೆ ಎಂದು ಮನವಿ ಮಾಡಲಾಗಿದೆ.

ಎರಡೂ ಠಾಣೆಗಳನ್ನು ವಾಯುವ್ಯ (ಪೀಣ್ಯ) ಉಪ ವಿಭಾಗಕ್ಕೆ ಸೇರ್ಪಡೆ ಮಾಡಬೇಕು ಎಂದು ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.