ADVERTISEMENT

ಟೆಂಡರ್ ಕರೆಯಲು ನಗರಾಭಿವೃದ್ಧಿ ಇಲಾಖೆ ನಿರ್ದೇಶನ

ಫಶ್ಚಿಮ ಕಾರ್ಡ್ ರಸ್ತೆ ಹೆಚ್ಚುವರಿ ಮೇಲ್ಸೇತುವೆ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 19:25 IST
Last Updated 31 ಜನವರಿ 2022, 19:25 IST

ಬೆಂಗಳೂರು: ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಕೆಟಿಪಿಪಿ ಕಾಯ್ದೆಯ ಅನ್ವಯ ಟೆಂಡರ್‌ ಕರೆದೇ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎಂದು ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಕಾಮಗಾರಿಗಳ ನೆಪದಲ್ಲಿ ಮೂಲ ಗುತ್ತಿಗೆ ಮೊತ್ತಕ್ಕಿಂತ ಅನೇಕ ಪಟ್ಟು ಹೆಚ್ಚು ಮೊತ್ತದ ಕಾಮಗಾರಿಯನ್ನು ಒಬ್ಬರೇ ಗುತ್ತಿಗೆದಾರರಿಗೆ (ಎಂ.ವೆಂಕಟರಾವ್‌ ಇನ್‌ಫ್ರಾ ಪ್ರಾಜೆಕ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ) ವಹಿಸಲು ಕೆಟಿಪಿಪಿ ಕಾಯ್ದೆಯ 4ಜಿ ಸೆಕ್ಷನ್‌ ಅಡಿ ವಿನಾಯಿತಿ ನೀಡಬೇಕು ಹಾಗೂ ರಾಜ್ಯ ಸರ್ಕಾರವೇ ಅನುದಾನ ನೀಡಬೇಕು ಎಂದು ನಗರಾಭಿವೃದ್ಧಿ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿತ್ತು. ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಯಾರಿಗೆ ವಹಿಸಬೇಕು ಎಂಬ ಬಗ್ಗೆ ನಗರಾಭಿವೃದ್ಧಿ ಇಲಾಖೆಯು ತಾಂತ್ರಿಕ ವರದಿ ಪಡೆದು ಕೆಟಿಪಿಪಿ ಕಾಯ್ದೆಯನ್ನು ಅನುಸರಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದರು.

ಟೆಂಡರ್‌ ಕರೆದೇ ಕಾಮಗಾರಿ ನಡೆಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ತಾಂತ್ರಿಕ ಕೋಶ ಸಹ ಅಭಿಪ್ರಾಯ ನೀಡಿದೆ. ಅದರ ಆಧಾರದಲ್ಲಿ ಇಲಾಖೆ ಈ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿ ಗುತ್ತಿಗೆದಾರರಿಗೆ ಕಾಮಗಾರಿ ವಹಿಸಿರುವ ಬಗ್ಗೆ ’ಪ್ರಜಾವಾಣಿ‘ ಸರಣಿ ವರದಿಗಳನ್ನು ಪ್ರಕಟಿಸಿತ್ತು.

ADVERTISEMENT

ಈ ಯೋಜನೆಗೆ ಅಗತ್ಯವಿರುವ ₹20.64 ಕೋಟಿಗಳನ್ನು ಇತ್ತೀಚೆಗೆ ಅನುಮೋದನೆಗೊಂಡ ಬೆಂಗಳೂರು ಅಮೃತ್‌ ನಗರೋತ್ಥಾನ ಯೋಜನೆಯಡಿ ಸೇರಿಸಲು ಸಹ ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದೆ.

ಪಶ್ಚಿಮ ಕಾರ್ಡ್‌ ರಸ್ತೆಗೆ ರಾಜಾಜಿನಗರದಲ್ಲಿ – ಮಂಜುನಾಥನಗರ ಮುಖ್ಯರಸ್ತೆ ಕೂಡುವಲ್ಲಿ ದ್ವಿಪಥ ಸಂಚಾರದ ಮೇಲ್ಸೇತುವೆ, ಶಿವನಗರದ 8ನೇ ಮತ್ತು 1ನೇ ಮುಖ್ಯ ರಸ್ತೆಗಳು ಕೂಡುವಲ್ಲಿ ದ್ವಿಮುಖ ಸಂಚಾರದ ಇಂಟಿಗ್ರೇಟೆಡ್‌ ಅಂಡರ್‌ ಪಾಸ್‌ ಮತ್ತು ಬಸವೇಶ್ವರ ನಗರದ ಮುಖ್ಯರಸ್ತೆ ಕೂಡುವಲ್ಲಿ ಏಕಮುಖ ಸಂಚಾರದ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳ ಪ್ಯಾಕೇಜ್‌ನ ಗುತ್ತಿಗೆಯನ್ನು ಎಂ.ವೆಂಕಟರಾವ್‌ ಇನ್‌ಫ್ರಾ ಪ್ರಾಜೆಕ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಗೆ ನೀಡಲಾಗಿದೆ. ಒಟ್ಟು ₹ 89.86 ಕೋಟಿ ವೆಚ್ಚದಈ ಪ್ಯಾಕೇಜ್‌ಗೆ 2015ರ ಫೆ.11ರಂದು ಅನುಮೋದನೆ ನೀಡಲಾಗಿತ್ತು.

ಮಂಜುನಾಥನಗರದ ಮುಖ್ಯರಸ್ತೆ ಕೂಡುವಲ್ಲಿನ ಮೇಲ್ಸೇತುವೆ 2018ರ ಆ. 27ರಂದು ಲೋಕಾರ್ಪಣೆಗೊಂಡಿದೆ. ಶಿವನಗರ 8ನೇ ಮತ್ತು 1ನೇ ಮುಖ್ಯ ರಸ್ತೆ ಕೂಡುವಲ್ಲಿ ಇಂಟಿಗ್ರೇಟೆಡ್‌ ಅಂಡರ್‌ಪಾಸ್‌ ಬದಲಿಗೆ ಮೇಲ್ಸೇತುವೆಯನ್ನೇ ನಿರ್ಮಿಸಲಾಗಿದ್ದು, 2021ರ ಅ. 4ರಂದು ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ.

ಶಿವನಗರ ಮುಖ್ಯರಸ್ತೆಗಳು ಕೂಡುವಲ್ಲಿನ ಮೇಲ್ಸೇತುವೆಯ ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ ವಸತಿ ಸಚಿವ ವಿ.ಸೋಮಣ್ಣ ಹಾಗೂ ರಾಜಾಜಿನಗರ ಶಾಸಕ ಎಸ್‌. ಸುರೇಶ್‌ ಕುಮಾರ್‌, ಬಸವೇಶ್ವರನಗರದ ಮುಖ್ಯರಸ್ತೆ ಕೂಡುವಲ್ಲಿಯೂ ದ್ವಿಮುಖ ಸಂಚಾರದ ಮೇಲ್ಸೇತುವೆ ನಿರ್ಮಿಸುವಂತೆ ಕೋರಿಕೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ ಮುಖ್ಯಮಂತ್ರಿಯವರು, ಬಿಬಿಎಂಪಿ ಅಧಿಕಾರಿಗಳಿಗೆ ಮೌಖಿಕ ಆದೇಶವನ್ನೂ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.