ಸ್ವಾತಂತ್ರ್ಯ ಉದ್ಯಾನ
ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ಸುಮಾರು 10 ವರ್ಷಗಳಿಂದ ಗುಡಿಸಲು ಹಾಕಿಕೊಂಡು ವಾಸಿಸುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಏಪ್ರಿಲ್ 21ರಿಂದ 22ರವರೆಗೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ತಿಳಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಗೌರವ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಅವರು, ‘ಅಲೆಮಾರಿ ಮತ್ತು ಅರೆ ಅಲೆಮಾರಿ ಜನರು ಹೆಚ್ಚಾಗಿ ವಾಸಿಸುತ್ತಿರುವ ಜಿಲ್ಲೆಗಳಲ್ಲಿ ಅಲೆಮಾರಿ ಸಮುದಾಯ ಭವನಗಳ ನಿರ್ಮಿಸುವುದು ಹಾಗೂ ವಸತಿ ಶಾಲೆಗಳನ್ನು ತೆರೆಯಬೇಕು. ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಬೇಕು’ ಎಂದು ಆಗ್ರಹಿಸಿದರು.
‘ನೀಟ್ ಮತ್ತು ಸಿಇಟಿ ಪರೀಕ್ಷೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳನ್ನು ನಮ್ಮ ಮಕ್ಕಳಿಗೂ ನೀಡಬೇಕು. ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿರುವ 46 ಜಾತಿಗಳ ಕುಲಶಾಸ್ತ್ರೀಯ ಅಧ್ಯಯನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದರು.
ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಪ್ರಕಾಶ್ ಎಂ., ಗೌರವ ಸಲಹೆಗಾರ ಬಿ.ಎನ್. ನಾರಾಯಣಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.