ADVERTISEMENT

ಎನ್‌ಎಚ್‌ಎಂ ನೌಕರರ ಸೇವೆ ಕಾಯಂಗೊಳಿಸಿ: ಎಂ.ವೆಂಕಟಸ್ವಾಮಿ

ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 3:33 IST
Last Updated 1 ಮಾರ್ಚ್ 2023, 3:33 IST
   

ಬೆಂಗಳೂರು: ‘ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು’ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ ಆಗ್ರಹಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎನ್‌ಎಚ್‌ಎಂ ಗುತ್ತಿಗೆ ನೌಕರರು ಕೋವಿಡ್ ಸಂದರ್ಭದಲ್ಲಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಸೇವೆ ಸಲ್ಲಿಸಿದ್ದಾರೆ. ಇದೀಗ ಸಮಾನ ಕೆಲಸಕ್ಕೆ ಸಮಾನ ವೇತನ, ವಿಶೇಷ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, 16 ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಪ್ರತಿಭಟನಾನಿರತ ನೌಕರರಲ್ಲಿ ಬಹುತೇಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದು, ಅವರ ನ್ಯಾಯೋಚಿತ ಬೇಡಿಕೆಗಳಿಗೆ ಸರ್ಕಾರ ಉದಾಸೀನ ತೋರುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಇವರ ಸೇವೆಯನ್ನು ಪರಿಗಣಿಸಿ, ತೆಲಂಗಾಣ ರಾಜ್ಯದಲ್ಲಿ ಕಾಯಂಗೊಳಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿಯೂ ಕಾಯಂಗೊಳಿಸಲು ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುತ್ತಿಗೆ ನೌಕರರ ಹೋರಾಟವನ್ನು ಹಗುರವಾಗಿ ಪರಿಗಣಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರೊಬ್ಬರು ಈ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿರುವ ಅವರು, ‘ಶೇ 15ರಷ್ಟು ಸಂಬಳ ಹೆಚ್ಚಿಸುತ್ತೇವೆಯೇ ಹೊರತು ಸೇವೆಯನ್ನು ಕಾಯಂಗೊಳಿಸುವುದಿಲ್ಲ’ ಎಂಬ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.