ADVERTISEMENT

‘ಎಲ್ಲ 28 ಕ್ಷೇತ್ರಗಳಲ್ಲಿ ಪದವಿ ಕಾಲೇಜು’

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:33 IST
Last Updated 15 ಫೆಬ್ರುವರಿ 2021, 21:33 IST
ಡಾ.ಸಿ.ಎನ್. ಅಶ್ವತ್ಥನಾರಾಯಣ
ಡಾ.ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ‘ಮೊದಲ ಹಂತದಲ್ಲಿ ಬೆಂಗಳೂರಿನ ಎಲ್ಲ 28 ವಿಧಾನಸಭೆ ಕ್ಷೇತ್ರಗಳಲ್ಲಿ ಗುಣಮಟ್ಟದ ಸರ್ಕಾರಿ ಪದವಿ ಕಾಲೇಜುಗಳನ್ನು ಆರಂಭಿಸಿ, ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ‘ಬೆಂಗಳೂರು ಕೇಂದ್ರ, ಬೆಂಗಳೂರು ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳ ಮೂಲಕ ಈ ವಿಧಾನಸಭೆ ಕ್ಷೇತ್ರಗಳಲ್ಲಿ ಪದವಿ ಕಾಲೇಜುಗಳನ್ನು ಆರಂಭಿಸಲಾಗುವುದು’ ಎಂದರು.

‘ಬೆಂಗಳೂರಿನ ಜನಸಂಖ್ಯೆ 1.50 ಕೋಟಿ ದಾಟಿದೆ. ಇನ್ನು ಕೆಲವೇ ವರ್ಷಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಪರಿಣಾಮಕಾರಿಯಾಗಿ ಪೂರೈಸಬೇಕಾದರೆ ಹೊಸ ಕಾಲೇಜುಗಳನ್ನು ಆರಂಭಿಸಬೇಕಾಗಿದೆ. ಅಲ್ಲದೆ, ಈ ಕಾಲೇಜುಗಳಿಗೆ ಅಗತ್ಯವಾದ ಭೂಮಿಯನ್ನು ಸರ್ಕಾರವೇ ನೀಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು’ ಎಂದರು.

ADVERTISEMENT

‘ನಗರದ ವ್ಯಾಪ್ತಿಯಲ್ಲಿ ಕಾಲೇಜುಗಳ ನಿರ್ಮಾಣಕ್ಕೆ ಬೇಕಾಗುವ ಭೂಮಿ ಎಲ್ಲೆಲ್ಲಿ ಲಭ್ಯವಿದೆ ಎಂಬ ಮಾಹಿತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಅವರಿಗೆ ಸೂಚಿಸಿದ್ದೇನೆ. ಶೀಘ್ರದಲ್ಲಿ ನಗರದ ಎಲ್ಲ ಶಾಸಕರ ಸಭೆ ಕರೆದು, ಭೂಮಿ ಪಡೆಯುವ ಸಂಬಂಧ ಅವರೆಲ್ಲರ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು’ ಎಂದರು.

8 ಸಾವಿರ ಬೋಧಕರ ಮಂಜೂರು: ‘ರಾಜ್ಯದ ಪದವಿ ಕಾಲೇಜುಗಳಿಗೆ ಇನ್ನೂ 8,000 ಬೋಧಕ ಹುದ್ದೆಗಳನ್ನು ಮಂಜೂರು ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಒಟ್ಟು ಬಜೆಟ್‌ ಗಾತ್ರದಲ್ಲಿ ಶೇ 3.5ರಷ್ಟು ಮೊತ್ತವನ್ನು ಉನ್ನತ ಶಿಕ್ಷಣಕ್ಕೆ ಮೀಸಲಿಡುವಂತೆಯೂ ಮನವಿ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.