ADVERTISEMENT

ದ್ವಿಚಕ್ರ ವಾಹನ ಕಳವು | ಆರೋಪಿ ಬಂಧನ: ಏಳು ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 27 ಮೇ 2025, 15:46 IST
Last Updated 27 ಮೇ 2025, 15:46 IST
   

ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿ, ₹5 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಮಾರಸ್ವಾಮಿ ಲೇಔಟ್‌ನ ನಿವಾಸಿ ಇಮ್ರಾನ್ ಖಾನ್ (27) ಎಂಬಾತನನ್ನು ಬಂಧಿಸಿ, ಏಳು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.  

ಸುಂಕದಕಟ್ಟೆಯ ಟೆಲಿಕಾಂ ಲೇಔಟ್ ನಿವಾಸಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ಪರಿಚಯಸ್ಥರ ಮನೆಗೆ ಕಾರ್ಯಕ್ರಮ ನಿಮಿತ್ತ ಹೋಗಿದ್ದು, ಗಾಣಿಗರ ಪಾಳ್ಯ 4ನೇ ಮುಖ್ಯ ರಸ್ತೆಯಲ್ಲಿ ವಾಹನ ನಿಲ್ಲಿಸಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಮಧ್ಯಾಹ್ನ ಮನೆಗೆ ವಾಪಸ್ ಹೋಗಲು ವಾಹನ ನಿಲ್ಲಿಸಿದ್ದ ಸ್ಥಳಕ್ಕೆ ಹೋದಾಗ ಅಲ್ಲಿ ಇರಲಿಲ್ಲ. ಸ್ಥಳೀಯರ ಬಗ್ಗೆ ಮಾಹಿತಿ ಸಿಗದಿದ್ದಾಗ ಪೊಲೀಸರಿಗೆ ದೂರು ನೀಡಿದರು.

ADVERTISEMENT

‍ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆ ಹಾಕಿ ಇಮ್ರಾನ್ ಖಾನ್‌ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ವಾಹನ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸುದೀರ್ಘ ವಿಚಾರಣೆಗೆ ಒಳಪಡಿಸಿದಾಗ ನಗರದ ವಿವಿಧ ಕಡೆಗಳಲ್ಲಿ ಏಳು ದ್ವಿಚಕ್ರ ವಾಹನ ಕಳವು ಮಾಡಿರುವುದಾಗಿ ತಿಳಿಸಿದ್ದು. ಆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಬಂಧನದಿಂದ ತಲಘಟ್ಟಪುರ ಪೊಲೀಸ್ ಠಾಣೆ–3, ಪರಪ‍್ಪನ ಅಗ್ರಹಾರ ಪೊಲೀಸ್ ಠಾಣೆ, ಕನಕಪುರ ಪೊಲೀಸ್ ಠಾಣೆ, ಹಾರೋಹಳ್ಳಿ ಪೊಲೀಸ್ ಠಾಣೆ, ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ತಲಾ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯು ಕುಮಾರಸ್ವಾಮಿ ಲೇಔಟ್‌ನಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ನಿತ್ಯದ ಖರ್ಚಿಗಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ, ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿದ್ದ. ಆರೋಪಿ ವಿರುದ್ಧ ಹಲವು ಠಾಣೆಗಳಲ್ಲಿ ವಾಹನ ಕಳ್ಳತನ ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.