ADVERTISEMENT

ವೀರಶೈವ ಅಭಿವೃದ್ಧಿ ನಿಗಮಕ್ಕೆ ಕಾಶಪ್ಪನವರ ಅಧ್ಯಕ್ಷ: ಸಿಎಂ ಸಿದ್ದರಾಮಯ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 15:20 IST
Last Updated 17 ಫೆಬ್ರುವರಿ 2024, 15:20 IST
ವಿಜಯಾನಂದ ಕಾಶಪ್ಪನವರ
ವಿಜಯಾನಂದ ಕಾಶಪ್ಪನವರ   

ಬೆಂಗಳೂರು: ಹುನಗುಂದ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವ ಆದೇಶವನ್ನು ರದ್ದುಪಡಿಸಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ವಿಜಯಾನಂದ ಅವರನ್ನು ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಜನವರಿ 26ರಂದು ಆದೇಶ ಹೊರಡಿಸಲಾಗಿತ್ತು. ಬಳಿಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಮಾಡಿ, ಬದಲಾವಣೆಗೆ ಮನವಿ ಮಾಡಿದ್ದರು. ಆ ಬಳಿಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೇಮಕಗೊಂಡ ದಿನದಿಂದ ಎರಡು ವರ್ಷಗಳ ಅವಧಿಗೆ ವಿಜಯಾನಂದ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕು. ಸಂಪುಟ ದರ್ಜೆಯ ಸ್ಥಾನ ನೀಡಿ, ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನೂ ಒದಗಿಸಬೇಕು ಎಂದು ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಟಿಪ್ಪಣಿಯಲ್ಲಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ADVERTISEMENT

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿರುವ ವಿಜಯಾನಂದ ಅವರು, ಪಂಚಮಸಾಲಿ ಮೀಸಲಾತಿಯ ಹೋರಾಟದ ಮುಂಚೂಣಿಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.