ADVERTISEMENT

ಕಟ್ಟಡ ನಿಯಮ ಉಲ್ಲಂಘನೆ: ದಿಢೀರ್‌ ಕ್ರಮ ಬೇಡ –ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 20:00 IST
Last Updated 26 ಮಾರ್ಚ್ 2022, 20:00 IST
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ   

ಬೆಂಗಳೂರು: ಕಟ್ಟಡಗಳ ನಿರ್ಮಾಣದಲ್ಲಿ ನಿಯಮ ಉಲ್ಲಂಘನೆ ಆಗಿರುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತರಾತುರಿಯಲ್ಲಿ ಕ್ರಮ ಜರುಗಿಸಬಾರದು. ಸುಪ್ರೀಂ ಕೋರ್ಟ್‌ನಲ್ಲಿ ಈ ಸಂಬಂಧ ಬಾಕಿ ಇರುವ ಪ್ರಕರಣದ ವಿಚಾರಣೆ ಮುಗಿಯು ವವರೆಗೂ ಕಾಲಾವಕಾಶ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಒತ್ತಾಯಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನಧಿಕೃತ ನಿರ್ಮಾಣಗಳನ್ನು ಸಕ್ರಮ ಗೊಳಿಸುವುದಕ್ಕೆ ರೂಪಿಸಿದ್ದ ಕಾಯ್ದೆ ಯನ್ನು ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ಆದರೆ, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವವರಿಗೆ ಹೈಕೋರ್ಟ್‌ ನಿರ್ದೇಶನದ ಅನುಸಾರ ನೋಟಿಸ್‌ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದ ರಿಂದ ಬೆಂಗಳೂರಿನ 20 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕುತ್ತಾರೆ’ ಎಂದರು.

ಶೇಕಡ 15ರಿಂದ 20ರಷ್ಟು ಪ್ರಮಾಣದ ಉಲ್ಲಂಘನೆ ಇರುವ ಕಟ್ಟಡಗಳನ್ನು ಸಕ್ರಮಗೊಳಿಸಲು ಹಿಂದೆ ಬಿಜೆಪಿ ಸರ್ಕಾರ ತೀರ್ಮಾನಿಸಿತ್ತು. ವಸತಿ ಕಟ್ಟಡಗಳಲ್ಲಿ ಶೇ 50ರಷ್ಟು ಮತ್ತು ವಾಣಿಜ್ಯ ಕಟ್ಟಡಗಳಲ್ಲಿ ಶೇ 25ರವರೆಗಿನಉಲ್ಲಂಘನೆಗಳನ್ನು ಸಕ್ರಮಗೊಳಿ ಸಲು ಕಾಂಗ್ರೆಸ್‌ ಸರ್ಕಾರದ ಅವಧಿ ಯಲ್ಲಿ ತೀರ್ಮಾನಿಸಲಾಗಿತ್ತು. ಅದನ್ನು ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ ನಲ್ಲಿ ಬಾಕಿ ಇದೆ ಎಂದು ಹೇಳಿದರು.

ADVERTISEMENT

‘ಹೈಕೋರ್ಟ್‌ ನಿರ್ದೇಶನವನ್ನು ಪಾಲಿಸಿ, ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹೊರಟಿದೆ. ಕಾನೂನು ಪ್ರಕಾರ ಅದು ಸರಿಯಾದ ಕ್ರಮ ಹೌದು. ಆದರೆ, ಇದರಿಂದ ನಿತ್ಯವೂ ಸಾವಿರಾರು ಮಂದಿಗೆ ನೋಟಿಸ್‌ ನೀಡಬೇಕಾಗುತ್ತದೆ. ಜನರು ಆತಂಕಕ್ಕೆ ಸಿಲುಕುತ್ತಾರೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಈ ಕ್ರಮ ಕೈಗೊಳ್ಳಬಾರದು. ವಿಧಾನಸಭೆಯಲ್ಲೂ ಈ ವಿಷಯ ಪ್ರಸ್ತಾಪಿಸುತ್ತೇನೆ’ ಎಂದು ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.