
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬೆಂಗಳೂರು ಜಲಮಂಡಳಿ ಸಿಹಿ ಸುದ್ದಿ ನೀಡಿದ್ದು, ಅಸಲು ಪಾವತಿಸಿದರೆ ಬಡ್ಡಿ ಮತ್ತು ದಂಡವನ್ನು ಪೂರ್ತಿ ಮನ್ನಾ ಮಾಡಲಾಗುತ್ತದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಬಾಕಿ ಇರುವ ಮೊತ್ತವನ್ನು ಏಕಕಾಲದಲ್ಲಿ ಪಾವತಿಸುವ ಮೂಲಕ ಈ ಸೌಲಭ್ಯ ಪಡೆಯಬಹುದು. 2026ರ ಜನವರಿ, ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಮಾತ್ರ ಈ ಯೋಜನೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹೈದರಾಬಾದ್‌ನಲ್ಲಿ ಈ ಯೋಜನೆ ಎರಡು ಬಾರಿ ಯಶಸ್ವಿಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅದೇ ಮಾದರಿಯನ್ನು ಈಗ ಬೆಂಗಳೂರಿನಲ್ಲಿ ಅಳವಡಿಸಿಕೊಳ್ಳಲಾಗಿದೆ. ಗ್ರಾಹಕರು ಅಸಲು ಪಾವತಿಸುತ್ತಿದ್ದಂತೆಯೇ, ತಂತ್ರಾಂಶದಲ್ಲಿ ಬಡ್ಡಿ ಮತ್ತು ದಂಡದ ಮೊತ್ತ ಸ್ವಯಂಚಾಲಿತವಾಗಿ ಮನ್ನಾ ಆಗಲಿದೆ ಎಂದು ತಿಳಿಸಿದ್ದಾರೆ.
ಗ್ರಾಹಕರು ನೇರವಾಗಿ ಜಲಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಇದಕ್ಕಾಗಿ ಹೊಸ ಆ್ಯಪ್ ಸಿದ್ಧಪಡಿಸುತ್ತಿದ್ದು, ಇದರಲ್ಲಿ ನೋಂದಣಿ ಮಾಡಿಕೊಂಡ ಗ್ರಾಹಕರಿಗೆ ಹಣ ಪಾವತಿಸಲು ಕಾಲಾವಕಾಶ ಮತ್ತು ಅಂತಿಮ ದಿನಾಂಕವನ್ನು ತಿಳಿಸಲಾಗುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಯೋಜನೆ ಜಾರಿಗೊಳಿಸುವ ದಿನಾಂಕವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
ಕಟ್ಟಡಗಳ ಭೇಟಿ: ಸರ್ಕಾರಿ ಕಟ್ಟಡಗಳು ಮತ್ತು ವಾಣಿಜ್ಯ ಮಳಿಗೆಗಳಿಗೆ ಜಲಮಂಡಳಿಯ ವಿಶೇಷ ತಂಡ ಖುದ್ದಾಗಿ ಭೇಟಿ ನೀಡಿ, ಮಾಹಿತಿ ನೀಡಲಿದೆ. ವಸತಿ ಕಟ್ಟಡಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಸಂಪರ್ಕಿಸುತ್ತಾರೆ ಹಾಗೂ ವೆಬ್‌ಸೈಟ್ ಮತ್ತು ಆ್ಯಪ್ ಮೂಲಕವೂ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.