ಬೆಂಗಳೂರು: ‘ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸಬೇಕು ಎಂದು ಮೂರು ತಿಂಗಳ ಹಿಂದೆಯೇ ಮನವಿ ಮಾಡಿಕೊಂಡಿದ್ದರೂ, ಜಲಮಂಡಳಿ ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಇಂದು ನೀರಿನ ಸಮಸ್ಯೆ ಹೆಚ್ಚಾಗಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಆರ್. ರಮೇಶ್ ಹೇಳಿದ್ದಾರೆ.
‘1250 ಎಂಎಲ್‌ಡಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸಿ ಅದನ್ನು ತುಂಬಿಸಬೇಕು. ಈ ವರ್ಷ ಮಳೆಯಾಗಿಲ್ಲ, ನೀರಿನ ಸಮಸ್ಯೆ ಉಂಟಾಗಬಹುದು. ಈಗಲೇ ಕ್ರಮ ಕೈಗೊಂಡರೆ ಕೊಳವೆಬಾವಿಗಳಲ್ಲಿ ನೀರು ಇರುವಂತೆ ನೋಡಿಕೊಳ್ಳಬಹುದು ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಮೂರು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದ್ದರು. ಆದರೆ, ಈವರೆಗೂ ಆ ಕೆಲಸ ಆಗಿಲ್ಲ’ ಎಂದು ದೂರಿದ್ದಾರೆ.
‘ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸಲು ಇದೀಗ ಕ್ರಮ ಕೈಗೊಳ್ಳುವುದಾಗಿ ಜಲಮಂಡಳಿ ಅಧ್ಯಕ್ಷರು ಹೇಳುತ್ತಿದ್ದಾರೆ. ಇದನ್ನು ಕಳೆದ ವರ್ಷವೇ ಮಾಡಿದ್ದರೆ ನೀರಿನ ಸಮಸ್ಯೆ ಉಂಟಾಗುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ, ವಿಳಂಬ ಧೋರಣೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈಗಲಾದರೂ ಯುದ್ಧೋಪಾದಿಯಲ್ಲಿ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.