ADVERTISEMENT

ಮೂವರು ಡಿಸಿಎಂ | ಹೈಕಮಾಂಡ್‌ ಭೇಟಿಗೆ ನಿರ್ಧಾರ: ಸಚಿವ ಕೆ.ಎನ್‌. ರಾಜಣ್ಣ

‘ಒಬ್ಬರೇ ಡಿಸಿಎಂ ಇರಬೇಕೆಂಬುದು ಡಿಕೆಶಿ ಅಭಿಪ್ರಾಯ ಇರಬಹುದು’

​ಪ್ರಜಾವಾಣಿ ವಾರ್ತೆ
Published 5 ಜನವರಿ 2024, 16:10 IST
Last Updated 5 ಜನವರಿ 2024, 16:10 IST
ಕೆ.ಎನ್.ರಾಜಣ್ಣ
ಕೆ.ಎನ್.ರಾಜಣ್ಣ   

ಬೆಂಗಳೂರು: ‘ರಾಜ್ಯದಲ್ಲಿ ಮೂವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಮನವರಿಕೆ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌ ಭೇಟಿ ಮಾಡಲು ನಿರ್ಧರಿಸಿದ್ದೇವೆ’ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ನಡೆದ ಭೋಜನಕೂಟದ ಸಭೆಯ ಕುರಿತು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ಭೋಜನಕೂಟದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ. ಮೂವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲು ಒಟ್ಟಾಗಿ ಹೈಕಮಾಂಡ್‌ ಭೇಟಿ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ’ ಎಂದರು.

ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆದಾಗ ಒಂದಕ್ಕಿಂತ ಹೆಚ್ಚು ಮಂದಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ತೀರ್ಮಾನವನ್ನು ಬಿಜೆಪಿ ಮಾಡಿತ್ತು. ಈಗ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಕಾಂಗ್ರೆಸ್‌ ಪಕ್ಷದ ಜತೆಯಲ್ಲಿ ಉಳಿಸಿಕೊಳ್ಳಬೇಕಿದೆ. ಅದಕ್ಕಾಗಿ ಇನ್ನಷ್ಟು ಮಂದಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆ ಮಂಡಿಸಲಾಗುವುದು ಎಂದು ಹೇಳಿದರು.

ADVERTISEMENT

‘ಒಬ್ಬರೇ ಉಪ ಮುಖ್ಯಮಂತ್ರಿ ಇರಬೇಕು ಎಂಬುದು ಡಿ.ಕೆ. ಶಿವಕುಮಾರ್ ಅವರ ಅಭಿಪ್ರಾಯ ಇರಬಹುದು. ಎಲ್ಲರ ಅಭಿಪ್ರಾಯ ಪಡೆದ ಬಳಿಕ ತೀರ್ಮಾನ ಮಾಡಬೇಕಾಗುತ್ತದೆ. ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಇಬ್ಬರಿಗೆ ನೀಡಬೇಕೊ ಅಥವಾ ಮೂವರಿಗೆ ನೀಡಬೇಕೊ ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಹೈಕಮಾಂಡ್‌ ಸೂಚನೆ ಕೊಟ್ಟರೆ ಸಚಿವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲೇಬೇಕಾಗುತ್ತದೆ. ಗೆಲುವಿನ ಮಾನದಂಡ ಆಧರಿಸಿ ಟಿಕೆಟ್‌ ನೀಡಲಾಗುತ್ತದೆ. ಸೂಚನೆ ಬಂದರೆ ನಾನು ಸೇರಿದಂತೆ ಎಲ್ಲ ಸಚಿವರೂ ಸ್ಪರ್ಧೆಗೆ ಸಿದ್ಧರಾಗಬೇಕು’ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಸಲಹೆ ನೀಡಿದೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, ‘ಯಾರನ್ನೂ ಸ್ಪರ್ಧಿಸದಂತೆ ನಿರ್ಬಂಧಿಸಲು ಆಗುವುದಿಲ್ಲ. ನಮ್ಮ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸಿ, ಕೆಲಸ ಮಾಡುವುದು ಗೊತ್ತಿದೆ’ ಎಂದು ಹೇಳಿದರು.

‘ಕಾರ್ಯಸೂಚಿ ಇರಲಿಲ್ಲ’

‘ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ನಡೆದ ಭೋಜನಕೂಟದಲ್ಲಿ ನಾನೂ ಪಾಲ್ಗೊಂಡಿದ್ದೆ. ಸಭೆಗೆ ಯಾವುದೇ ನಿರ್ದಿಷ್ಟ ಕಾರ್ಯಸೂಚಿ ಇರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನ ಗಳಿಸುವಂತೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚಿಸಿದ್ದೇವೆ’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.