ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸಿ, ಪಕ್ಷೇತರರಾಗಿ ಸ್ಪರ್ಧಿಸಲಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಗೆಲ್ಲಿಸುತ್ತೇವೆ’ ಎಂದು ಹಿಂದುಳಿದ ದಲಿತ ಸಮುದಾಯಗಳ (ಹಿಂದ) ಒಕ್ಕೂಟದ ಅಧ್ಯಕ್ಷ ಕೆ. ಮುಕುಡಪ್ಪ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆ.ಎಸ್. ಈಶ್ವರಪ್ಪ ಚುನಾವಣಾ ನಿವೃತ್ತಿ ಪಡೆದು ತಮ್ಮ ಮಗ ಕೆ.ಇ. ಕಾಂತೇಶ್‌ಗೆ ಹಾವೇರಿ–ಗದಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ, ಇಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿ ಮಾಡುವ ಮೂಲಕ ಕುರುಬ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.
‘ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಶಾಸಕರಾಗಿದ್ದಾರೆ. ಮತ್ತೊಬ್ಬ ಮಗ ಬಿ.ವೈ. ರಾಘವೇಂದ್ರ ಸಂಸದರಾಗಿದ್ದಾರೆ. ಅಪ್ಪ–ಮಕ್ಕಳು ಸೇರಿ ರಾಜ್ಯದಲ್ಲಿ ಬಿಜೆಪಿಯನ್ನು ಹಾಳು ಮಾಡುತ್ತಿದ್ದಾರೆ’ ಎಂದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ವಿ. ಆಂಜಿನಪ್ಪ, ‘ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಕರೆತಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸುವ ಯತ್ನ ನಡೆದಿದೆ. ಈಶ್ವರಪ್ಪ ಅವರ ವಿಚಾರದಲ್ಲಿ ಮಾತ್ರ ಅನ್ಯಾಯ ಮಾಡಲಾಗುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.