ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರದಿಂದ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುರುವಾರದಿಂದ ಮಳೆಯ ತೀವ್ರತೆ ಹೆಚ್ಚಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಯ ವಿವಿಧೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಯ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬುಧವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.