ಹೈಕೋರ್ಟ್
ಬೆಂಗಳೂರು: ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡದ ವಿಜಯೋತ್ಸವ ಆಚರಣೆ ವೇಳೆ ಬುಧವಾರ (ಜೂನ್ 4) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಜನ ಸಾವೀಗೀಡಾದ ಘಟನೆ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.
ಗುರುವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು.
"ಹೈಕೋರ್ಟ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಆಧರಿಸಿ ಈ ಪಿಐಎಲ್ ದಾಖಲಿಸಿಕೊಳ್ಳುತ್ತಿದ್ದೇವೆ" ಎಂದು ತಿಳಿಸಿತು.
"ಸರ್ಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಮಾಹಿತಿ ನೀಡಿ" ಎಂದು ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇಂದೇ ಮಧ್ಯಾಹ್ನದ ಕಲಾಪಕ್ಕೆ ನಿಗದಿಗೊಳಿಸಿತು.
ನ್ಯಾಯಪೀಠದ ಸೂಚನೆಗೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, "ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ. ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ಸರ್ಕಾರದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು" ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.