ADVERTISEMENT

ಭ್ರಷ್ಟರ ವಿರುದ್ಧ ಕ್ರಮ ಖಚಿತ: ಎಸ್‌.ಆರ್‌. ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 16:27 IST
Last Updated 20 ನವೆಂಬರ್ 2021, 16:27 IST
ಬಿಡಿಎ ಕಚೇರಿ ಮೇಲೆ ದಾಳಿಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶನಿವಾರ ಕಡತಗಳ ಪರಿಶೀಲನೆಯಲ್ಲಿ ತೊಡಗಿರುವುದು–ಪ್ರಜಾವಾಣಿ ಚಿತ್ರ
ಬಿಡಿಎ ಕಚೇರಿ ಮೇಲೆ ದಾಳಿಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶನಿವಾರ ಕಡತಗಳ ಪರಿಶೀಲನೆಯಲ್ಲಿ ತೊಡಗಿರುವುದು–ಪ್ರಜಾವಾಣಿ ಚಿತ್ರ   

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಡೆಸುತ್ತಿರುವ ತನಿಖೆಯಲ್ಲಿ ತಪ್ಪಿತಸ್ಥರೆಂದು ಗುರುತಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳ ವಿರುದ್ಧ ಕ್ರಮ ಖಚಿತ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ತಿಳಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಬಿಡಿಎ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವ ಕುರಿತು ಸಾರ್ವಜನಿಕರು ಎಸಿಬಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ತನಿಖೆ ನಡೆಯುತ್ತಿದೆ. ಪ್ರಾಧಿಕಾರವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ನನ್ನ ಗುರಿ ಕೂಡ. ಆದ್ದರಿಂದ ಎಸಿಬಿ ದಾಳಿಯನ್ನು ಸ್ವಾಗತಿಸುತ್ತೇನೆ’ ಎಂದರು.

‘ನಾನು ಅಧ್ಯಕ್ಷನಾಗಿ ಬಂದ ಬಳಿಕ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕ್ರಮ ಜರುಗಿಸಲಾಗಿತ್ತು. ನಾನು ಕೂಡ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು ನೀಡಿದ್ದೆ. ಅದಕ್ಕೆ ಪೂರಕವಾಗಿ ದಾಖಲೆಗಳನ್ನು ಒದಗಿಸುವುದಾಗಿ ತನಿಖಾ ತಂಡಕ್ಕೆ ತಿಳಿಸಿದ್ದೇನೆ’ ಎಂದು ಹೇಳಿದರು.

ADVERTISEMENT

‘ನನ್ನ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಹಿಂದೆ ಭ್ರಷ್ಟಾಚಾರ ನಡೆದಿತ್ತು. ಅಕ್ರಮಗಳನ್ನು ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ. ಎಸಿಬಿ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.