ADVERTISEMENT

ವರ್ಷದೊಳಗೆ 461 ವೈದ್ಯರ ನೇಮಕ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 16:16 IST
Last Updated 7 ಡಿಸೆಂಬರ್ 2023, 16:16 IST
ದಿನೇಶ್‌ ಗುಂಡೂರಾವ್
ದಿನೇಶ್‌ ಗುಂಡೂರಾವ್   

ವಿಧಾನಸಭೆ: ‘ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 461 ವೈದ್ಯರ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮತಿ ಪಡೆದು ವರ್ಷದೊಳಗೆ ಭರ್ತಿ ಮಾಡಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ತಿಳಿಸಿದರು.

ಕಾಂಗ್ರೆಸ್‌ನ ಬೇಳೂರು ಗೋಪಾಲಕೃಷ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತುಮರಿ, ಬ್ಯಾಕೋಡು ಮತ್ತು ಕಾರ್ಗಲ್‌ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗದೆ’ ಎಂದರು.

ಕ್ಯಾನ್ಸರ್‌ ಆಸ್ಪತ್ರೆ ಸ್ಥಾಪನೆಗೆ ಕ್ರಮ

ADVERTISEMENT

‘ಬಳ್ಳಾರಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಅಭಿವೃದ್ಧಿ ನಿಗಮದ (ಕೆಎಂಇಆರ್‌ಸಿ) ಅನುದಾನದಲ್ಲಿ ₹300 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಕಾಂಗ್ರೆಸ್‌ನ ಜೆ.ಎನ್‌. ಗಣೇಶ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಎಂಇಆರ್‌ಸಿ ಅನುದಾನದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಆಸ್ಪತ್ರೆ ನಿರ್ಮಾಣಕ್ಕೆ ₹300 ಕೋಟಿ ಮೀಸಲಿಡಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಆ ಅನುದಾನ ಲಭ್ಯವಾದರೆ, ಕಿದ್ವಾಯಿ ಸ್ಮಾರಕ ಗಂಥಿ ಚಿಕಿತ್ಸಾ ಸಂಸ್ಥೆಯ ಘಟಕ ಆರಂಭಿಸಲಾಗುವುದು’ ಎಂದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಪ್ರಸ್ತಾವ

‘ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆಗಳ ಆಸ್ಪತ್ರೆಯನ್ನು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವವಿದೆ’ ಎಂದು ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಕಾಂಗ್ರೆಸ್‌ನ ಸತೀಶ್ ಸೈಲ್‌ ಪ್ರಶ್ನೆಗೆ ಉತ್ತರಿಸಿದ ಅವರು, ‘ಉತ್ತರ ಕನ್ನಡ ಜಿಲ್ಲಾ ಆಸ್ಪತ್ರೆಗೆ ಏಳು ಸೂಪರ್‌ ಸ್ಪೆಷಾಲಿಟಿ ವೈದ್ಯರ ಹುದ್ದೆಗಳು ಮಂಜೂರಾಗಿವೆ. ಈ ಹುದ್ದೆಗಳೂ ಸೇರಿದಂತೆ ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸಿ, ವೈದ್ಯಕೀಯ ಕಾಲೇಜಿನ ಆಸ್ಪತ್ರೆಯನ್ನೇ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.