ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು 15 ದಿನಗಳೊಳಗೆ ಮುಚ್ಚಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
‘ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು. ಈಗಾಗಲೇ ‘ರಸ್ತೆ ಗುಂಡಿ ಗಮನ’ ಎಂಬ ಆ್ಯಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೊ ತೆಗೆದು ಅಪ್‌ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ನಗರದ ಅನೇಕ ಕಡೆ ರಸ್ತೆಗಳು ಹಾಳಾಗಿರುವುದರ ಬಗ್ಗೆಯೂ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆಗಳಲ್ಲಿ ಗುಂಡಿಗಳಾಗುತ್ತಿರಬಹುದು. ಇದರ ಬಗ್ಗೆಯೂ ಗಮನ ಹರಿಸಬೇಕು’ ಎಂದು ತಿಳಿಸಿದ್ದಾರೆ.
‘15 ದಿನಗಳ ಗಡುವು ಮುಗಿದ ನಂತರ ನಾನು ಖುದ್ದಾಗಿ ಇಡೀ ಬೆಂಗಳೂರು ನಗರವನ್ನು ಪ್ರದಕ್ಷಿಣೆ ಹಾಕಲಿದ್ದೇನೆ. ಪ್ರತಿ ರಸ್ತೆಯನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.