
ಡಾ. ನಾಗಲಕ್ಷ್ಮೀ ಚೌಧರಿ
ಬೆಂಗಳೂರು: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ 31 ಜಿಲ್ಲೆಗಳಲ್ಲಿ ಮಹಿಳಾ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಫಲಕ ಅಳವಡಿಕೆ, ಪ್ರತ್ಯೇಕ ಆ್ಯಪ್ ಮತ್ತು ಸಹಾಯವಾಣಿ ಆರಂಭಿಸಲು ಹೆಚ್ಚುವರಿಯಾಗಿ ₹19.80 ಕೋಟಿ ಅನುದಾನ ನೀಡುವಂತೆ ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
ಮಹಿಳೆಯರ ಹಕ್ಕುಗಳ ರಕ್ಷಣೆ, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಯಲು 2013ರ ಕಾಯ್ದೆಯ ಪ್ರಕಾರ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಥವಾ ಖಾಸಗಿ ಕಚೇರಿಗಳು, ಕಾರ್ಖಾನೆಗಳು, ಗಾರ್ಮೆಂಟ್ಸ್, ವಿಶ್ವವಿದ್ಯಾಲಯಗಳು, ಸಂಘ– ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ರಚಿಸುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
‘ಆಯೋಗದ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ದೂರುಗಳನ್ನು ಸ್ವೀಕರಿಸುವ ವ್ಯವಸ್ಥೆ ಇಲ್ಲ. ನೂತನ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ದೂರು ಸ್ವೀಕಾರ, ದೂರಿನ ಸ್ಥಿತಿಗತಿ, ವಿಲೇವಾರಿಯಾದ ದೂರುಗಳ ಮಾಹಿತಿ ಇರಲಿದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಅನುಕೂಲವಾಗಲಿದೆ. ಜೊತೆಗೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಸಹಾಯಕವಾಗುತ್ತದೆ’ ಎಂದು ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
‘ಇತ್ತೀಚೆಗೆ ಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ ಹಾಗೂ ಪೋಕ್ಸೊ ಕಾಯ್ದೆ ಅಡಿ ದಾಖಲಾಗುವ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಸಾರ್ವಜನಿಕರಲ್ಲಿ ಮಹಿಳಾ ಕಾನೂನುಗಳ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ’ ಎಂದರು.
‘ವಿಭಾಗೀಯ, ಜಿಲ್ಲಾ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕೆಲಸ ಮಾಡುವ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ರಚಿಸಿರುವ ಕುರಿತು ಸಮೀಕ್ಷೆ ನಡೆಸಬೇಕಾಗಿದೆ. ಮಾಧ್ಯಮ ನಿರ್ವಹಣೆ, ಮಹಿಳಾ ಸಹಾಯ ವೇದಿಕೆ, ಪ್ರತ್ಯೇಕ ಸಹಾಯವಾಣಿ, ಮಹಿಳಾ ಆಯೋಗದ ಆ್ಯಪ್ ರಚಿಸುವ ಅವಶ್ಯಕತೆ ಇದೆ’ ಎನ್ನುತ್ತಾರೆ ನಾಗಲಕ್ಷ್ಮೀ ಚೌಧರಿ.
‘ರಾಜ್ಯದ ಯಾವುದೇ ಭಾಗದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ, ಬೆಂಗಳೂರಿನ ಕೇಂದ್ರ ಕಚೇರಿಗೆ ಬಂದು ದೂರು ನೀಡಬೇಕಾಗಿದೆ. ಇದಕ್ಕಾಗಿ ಕೇವಲ ಐದು ಮಂದಿ ಸಿಬ್ಬಂದಿ ನಿಯೋಜಿಸಿದ್ದು, ಇದರಲ್ಲಿ ಒಬ್ಬರು ಕಾಯಂ. ಉಳಿದವರು ಗುತ್ತಿಗೆ ಆಧಾರದಲ್ಲಿ ಕಡಿಮೆ ಸಂಬಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಕೆಲಸದ ಒತ್ತಡವೂ ಹೆಚ್ಚಾಗಿ, ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ಆಯೋಗದ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್‌ಆರ್) ಬಳಸಿಕೊಂಡು ಮಹಿಳಾ ಆಯೋಗವನ್ನು ಮೇಲ್ದರ್ಜೆಗೇರಿಸಲು ಚಿಂತನೆ ನಡೆದಿದೆಡಾ. ನಾಗಲಕ್ಷ್ಮೀ ಚೌಧರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
- ಇನ್ನೂ ಸದಸ್ಯರ ನೇಮಕ ಮಾಡದ ಸರ್ಕಾರ
ಡಾ.ನಾಗಲಕ್ಷ್ಮೀ ಚೌಧರಿ ಅವರು ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡು 1 ವರ್ಷ ಏಳು ತಿಂಗಳು ಆಗಿದೆ. ಆಯೋಗದಲ್ಲಿ ಖಾಲಿ ಇರುವ ಆರು ಮಂದಿ ನಾಮನಿರ್ದೇಶಿತ ಸದಸ್ಯರ ಸ್ಥಾನಗಳನ್ನು ಮೂರು ತಿಂಗಳೊಳಗೆ ತುಂಬಬೇಕು ಎಂಬ ನಿಯಮ ಇದೆ. ಆದರೆ ರಾಜ್ಯ ಸರ್ಕಾರ ಇದುವರೆಗೂ ಸದಸ್ಯರನ್ನು ನೇಮಕ ಮಾಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.