ADVERTISEMENT

ಮಾರ್ಷಲ್‌ ನೇಮಕ ಪ್ರಶ್ನಿಸಿದ ರಿಟ್‌: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 1:41 IST
Last Updated 30 ಜನವರಿ 2020, 1:41 IST
   

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 198 ವಾರ್ಡ್‌ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಬಗ್ಗೆ ನಿಗಾ ವಹಿಸಲು ಮಾರ್ಷಲ್‌ಗಳನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಬಿಬಿಎಂಪಿ ಅಧಿಕಾರಿಗಳ ಮತ್ತು ಸಿಬ್ಬಂದಿ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಆಕ್ಷೇಪ ಏನು?: ‘ಮಾರ್ಷಲ್‌ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಲು ಹೊರಡಿಸಿರುವ ಕಾರ್ಯಾದೇಶವು, ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘನೆಯಾಗಿದೆ. ಅಂತೆಯೇ ಗುತ್ತಿಗೆ ಕಾರ್ಮಿಕರ (ನಿಯಂತ್ರಣ ಮತ್ತು ನಿಷೇಧ) ಕಾಯ್ದೆ–1970ಕ್ಕೆ ವಿರುದ್ಧವಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

ADVERTISEMENT

‘ಘನ ತ್ಯಾಜ್ಯ ವಿಲೇವಾರಿಯ ಬಗ್ಗೆ ನಿಗಾ ವಹಿಸಬೇಕಾದ್ದು ಕಿರಿಯ ಹಾಗೂ ಹಿರಿಯ ಆರೋಗ್ಯಾಧಿಕಾರಿಗಳ ಕೆಲಸ. ಆದರೆ, 38 ಕಿರಿಯ ಹಾಗೂ 30 ಹಿರಿಯ ಆರೋಗ್ಯಾಧಿಕಾರಿ ಹುದ್ದೆ ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿ ಮಾಡಿ ಪಾಲಿಕೆಯ ಸಿಬ್ಬಂದಿಗೆ ಘನತ್ಯಾಜ್ಯ ವಿಲೇವಾರಿ ನಿರ್ವಹಣೆಯ ಕೆಲಸವನ್ನು ವಹಿಸುವ ಬದಲು ಮಾರ್ಷಲ್‌ಗಳನ್ನು ನೇಮಕ ಮಾಡಿರುವುದು ಕಾನೂನು ಬಾಹಿರ’ ಎಂದು ದೂರಿದ್ದಾರೆ. ಅರ್ಜಿದಾರರ ಪರ ವಕೀಲ ವಿ.ಶ್ರೀನಿವಾಸ್ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.