ADVERTISEMENT

ಯಲಹಂಕ: ತಾಲ್ಲೂಕು ಆಡಳಿತದಿಂದ ಅದ್ದೂರಿ ಗಣರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 19:57 IST
Last Updated 26 ಜನವರಿ 2023, 19:57 IST
ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್, ಪೊಲೀಸ್ ತಂಡದ ಪಥಸಂಚಲನದಲ್ಲಿ ಗೌರವವಂದನೆ ಸ್ವೀಕರಿಸಿದರು.     
ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್, ಪೊಲೀಸ್ ತಂಡದ ಪಥಸಂಚಲನದಲ್ಲಿ ಗೌರವವಂದನೆ ಸ್ವೀಕರಿಸಿದರು.        

ಯಲಹಂಕ: ‘ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಭಾರತ ಹೆಚ್ಚು ಬಲಿಷ್ಠವಾಗುತ್ತಿದೆ. ಆದರೂ ಆಂತರಿಕವಾಗಿ ನಮ್ಮ ದೇಶವನ್ನು ಅಸ್ಥಿರಗೊಳಿಸಬೇಕೆಂದು ಕೆಲವು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳು ಹುನ್ನಾರ ನಡೆಸುತ್ತಿದ್ದು, ಇಂತಹ ದುಷ್ಟಶಕ್ತಿಗಳ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 74ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಅವರು ದೇಶದ ರಕ್ಷಣೆ ಕುರಿತು ಮಾತನಾಡಿದರು.

ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಧ್ವಜಾರೋಹಣ ನೆರವೇರಿಸಿದರು.

ADVERTISEMENT

ಅತ್ಯುತ್ತಮ ಸಾಧನೆ ಮಾಡಿದ ಗ್ರಾಮಪಂಚಾಯಿತಿಗಳ ಮೂವರಿಗೆ ‘ಗ್ರಾಮ-1’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಪೊಲೀಸ್, ಸಂಚಾರ ಪೊಲೀಸ್, ಎನ್.ಸಿಸಿ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಾದ್ಯಗೋಷ್ಠಿ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಗಮನ ಸೆಳೆದವು.

ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತರಾದ ಡಾ.ಪೂರ್ಣಿಮಾ ಪಿ.ವಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಪೂರ್ವ ಎ.ಕುಲಕರ್ಣಿ, ರಮೇಶ್ ಡಿ.ಒ, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎನ್.ಅಶ್ವಥನಾರಾಯಣ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ವಿಜಯಕುಮಾರ್, ಉಪ ತಹಶೀಲ್ದಾರ್ ರಮೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.