ಯಲಹಂಕ: ‘ಶಿಕ್ಷಣ ಎಂಬ ಆಸ್ತಿ ನಮ್ಮ ಜೊತೆಯಲ್ಲಿದ್ದರೆ ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಹಾಗೂ ಉನ್ನತಮಟ್ಟದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
ಕೆಬಿಜಿ ಸ್ವಯಂ ಸೇವಕರು ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ದೊಡ್ಡಬೊಮ್ಮಸಂದ್ರ ಮತ್ತು ವಿದ್ಯಾರಣ್ಯಪುರ ವಾರ್ಡ್ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 500 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
‘ಕ್ಷೇತ್ರ ವ್ಯಾಪ್ತಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಬಡ ಮಕ್ಕಳು ಹಾಗೂ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಅನುಕೂಲವಾಗಲು ಹಲವು ಸರ್ಕಾರಿ ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿ, ನೂತನ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ಕ್ರೀಡೆ, ಪರಿಸರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯ ನೀಡಲಾಗಿದೆ’ ಎಂದರು.
ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಟಿ.ಜಿ.ಚಂದ್ರು, ವಿ.ಹರಿ, ಆರ್.ಎಂ.ಶ್ರೀನಿವಾಸ್, ಬಿ.ಎಸ್.ಗೋಪಾಲಕೃಷ್ಣ, ತಿಂಡ್ಲು ಸತೀಶ್, ಮಲ್ಯಾದ್ರಿ, ಬಿ.ಸಿ.ಸುರೇಶ್, ಜನಾರ್ದನ್, ಬೇಬಿರಾಣಿ, ವಿಜಯಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.