ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ದೌರ್ಜನ್ಯಕ್ಕೊಳಗಾಗಿರುವ ಸಂತ್ರಸ್ತೆ ನೀಡಿರುವ ದೂರನ್ನು ಆಧರಿಸಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ಯುವ ಕಾಂಗ್ರೆಸ್ ಮುಖಂಡ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ದೇವರಾಜೇಗೌಡ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ಹೊರ ಹಾಕಿದರು.
‘ದೇವರಾಜೇಗೌಡ ಸಂತ್ರಸ್ತೆಯರಿಗೆ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ಸಂತ್ರಸ್ತೆಯೊಬ್ಬರು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೆನ್‌ಡ್ರೈವ್ ಹಂಚಿದ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಳು ಹೇಳಿಕೆ ನೀಡುತ್ತಿರುವ ದೇವರಾಜೇಗೌಡ, ಸಂತ್ರಸ್ತೆಯರ ಹಿತರಕ್ಷಣೆಗೆ ವಿರುದ್ಧವಾಗಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು’ ಎಂದು ಆಗ್ರಹಿಸಿದರು.
ಪೊಲೀಸ್ ಠಾಣೆಗೆ ಮನವಿ: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಆಧರಿಸಿ ದೇವರಾಜೇಗೌಡ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪುಟ್ಟರಾಜು ವೈ. ನೇತೃತ್ವದ ನಿಯೋಗವು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಶುಕ್ರವಾರ ಮನವಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.