ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿಯವರ ಪ್ರತಿಕೃತಿ ದಹಿಸಿದ ಯುವ ಕಾಂಗ್ರೆಸ್ ಸದಸ್ಯರು, ಆಕ್ರೋಶ ವ್ಯಕ್ತಪಡಿಸಿದರು.
‘ಬೊಮ್ಮಾಯಿ ಅವರು ಕೇವಲ ಸಂಘ ಪರಿವಾರದ ಮುಖ್ಯಮಂತ್ರಿ ಎಂಬಂತೆ ಹೇಳಿಕೆ ನೀಡಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮತೀಯ ಗೂಂಡಾಗಿರಿ ಹೆಚ್ಚುವ ಅಪಾಯವಿದೆ. ಸಂವಿಧಾನಬದ್ಧವಾಗಿ ಸರ್ಕಾರ ನಡೆಸಬೇಕಾದವರು ಹಾದಿ, ಬೀದಿಯಲ್ಲಿ ಧರ್ಮ ಬೋಧನೆ ಮಾಡುವುದು ಖಂಡನೀಯ’ ಎಂದು ರಕ್ಷಾ ರಾಮಯ್ಯ ಹೇಳಿದರು.
ರಾಜ್ಯ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷೆ ಭವ್ಯಾ, ಪ್ರಧಾನ ಕಾರ್ಯದರ್ಶಿ ಆನಂದ್, ಜವಾಹರ್ ಬಾಲ್ ಮುಂಚ್ ಅಧ್ಯಕ್ಷ ಸಿರಿಲ್ ಪ್ರಭು, ಕಾರ್ಯದರ್ಶಿ ಮಾನ್ನಾ ಮನ್ನಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.