ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಕೃತಿ, ವನ್ಯಜೀವಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತು ವನ್ಯಜೀವಿ ಹಾಗೂ ಪ್ರಕೃತಿಯ ಸಂರಕ್ಷಣೆಗಾಗಿ ಕೆಲಸ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸಲು ಅ.12ರಂದು ಬೆಳಿಗ್ಗೆ 10ಕ್ಕೆ ‘ಜೂ ಕ್ಲಬ್’ ಆಯೋಜಿಸಲಾಗುತ್ತಿದೆ.
ವನಸಿರಿ ಮತ್ತು ವನ್ಯಜೀವಿ ಸಂಕುಲಗಳನ್ನು ಸಂರಕ್ಷಿಸಲು ಯುವ ಮನಸ್ಸನ್ನು ಪ್ರೇರೇಪಿಸುವ ಉದ್ದೇಶದಿಂದ 15 ವಾರಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಕಾರ್ಯಕ್ರಮ ನಡೆಯಲಿದೆ. 10ರಿಂದ 18 ವರ್ಷದ ಒಳಗಿನವರು ಭಾಗವಹಿಸಬಹುದು.
ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣೆ, ನಿರ್ವಹಣೆ, ಪೋಷಣೆ, ನಡವಳಿಕೆಯ ಬಗ್ಗೆ ತಿಳಿಸಿಕೊಡಲಾಗುವುದು. ತಜ್ಞರೊಂದಿಗೆ ಸಮಾಲೋಚನೆ ಹಾಗೂ ಚರ್ಚೆ ನಡೆಸಲು ಅವಕಾಶ ಕಲ್ಪಿಸಲಾಗುವುದು. ಆಸಕ್ತರು ವೆಬ್‍ಸೈಟ್ https://bannerughattabiopark.org/education.htmlನಲ್ಲಿ ಲಭ್ಯವಿರುವ ಅರ್ಜಿಯ ಮೂಲಕ ನೋಂದಾಯಿಸಿಕೊಳ್ಳಬಹುದು.
ಗರಿಷ್ಠ 60 ವಿದ್ಯಾರ್ಥಿಗಳನ್ನು ಪರಿಗಣಿಸಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ನೋಂದಣಿ ಶುಲ್ಕ ₹ 1 ಸಾವಿರ ಆಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಯಾವುದೇ ನೊಂದಣಿ ಶುಲ್ಕ ಇರುವುದಿಲ್ಲ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.