ADVERTISEMENT

ಔರಾದ್: ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2011, 8:20 IST
Last Updated 15 ಸೆಪ್ಟೆಂಬರ್ 2011, 8:20 IST

ಔರಾದ್: ಶುಲ್ಕ ವಸೂಲಿ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ಇಲ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ಮುಖಂಡ ಅಶೋಕ ಶೆಂಬೆಳ್ಳಿ, ಬಸವರಾಜ ಹಳ್ಳೆ ನೇತೃತ್ವದಲ್ಲಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. 11 ಸಾವಿರ ಆದಾಯ ಇರುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಪಡೆಯಬಾರದು ಎಂಬ ನಿಯಮ ಇದೆ. ಆದರೆ ಎಲ್ಲ ವಿದ್ಯಾರ್ಥಿಗಳಿಗೂ 3200 ರೂ. ಬೋಧನಾ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ ದೂರಿದರು.

ಪ್ರವೇಶ ಪಡೆದ ಆರಂಭದಲ್ಲಿ ಕಟ್ಟಡ ಶುಲ್ಕ ಪಡೆಯಲಾಗುತ್ತದೆ. ಆದರೆ ಇಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳಿಂದ ಕಟ್ಟಡ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದರು.

ಪಾಲಿಟೆಕ್ನಿಕ್ ಕಾಲೇಜಿನಲ್ಲಿ 200 ವಿದ್ಯಾರ್ಥಿನಿಯರು ಸೇರಿದಂತೆ 800 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಇವರ‌್ಯಾರಿಗೂ ಶೌಚಾಲಯ ಸೌಲಭ್ಯ ಕಲ್ಪಿಸಲಾಗಿಲ್ಲ. ವಿದ್ಯಾರ್ಥಿನಿಯರು ಮೂತ್ರಾಲಯಕ್ಕಾಗಿ ಅಲ್ಲಿಯ ಹಳೆಯ ಕಟ್ಟಡ ಆಶ್ರಯಿಸಬೇಕಾಗಿದೆ. ಆದರೆ ಆ ಕಟ್ಟಡ ಬೀಳುವ ಹಂತಕ್ಕೆ ತಲುಪಿದ್ದು, ಯಾವಾಗ ಬೇಕಾದರೂ ಅವಗಢ ಸಂಭವಿಸಬಹುದಾಗಿದೆ. ಈ ಬಗ್ಗೆ ಕಾಳಜಿ ವಹಿಸಿ ತಕ್ಷಣ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.

ಬೇಡಿಕೆ ಕುರಿತು ಪ್ರಾಚಾರ್ಯರಿಗೆ ಮನವಿ ಸಲ್ಲಿಸಿ ವಾರದೊಳಗೆ ಸಮಸ್ಯೆ ಬಗೆಹರಿಯದಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಪ್ರದೀಪ, ಪ್ರಶಾಂತ, ಅನಿಲ, ವಿಶಾಲ ಮತ್ತಿತರರು ನೇತೃತ್ವವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.