ADVERTISEMENT

ಟನ್ ಕಬ್ಬಿಗೆ ₹2,200 ಮುಂಗಡ ಕೊಡದಿದ್ದರೆ ಕ್ರಮ

ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳ ಸಭೆ: ಖಂಡ್ರೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 6:19 IST
Last Updated 17 ಮಾರ್ಚ್ 2018, 6:19 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೀದರ್: ‘ರೈತರು ಸಂಕಷ್ಟದಲ್ಲಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ಕೂಡಲೇ ₹ 2,200 ಮುಂಗಡ ಕೊಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘₹ 2,200 ಮುಂಗಡ ಕೊಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ADVERTISEMENT

‘2017ರ ಡಿಸೆಂಬರ್ 13 ರಂದು ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರು ಮನವಿ ಸಲ್ಲಿಸಿದ ಪ್ರಯುಕ್ತ ಕಾರ್ಖಾನೆಗಳಿಂದ ಪ್ರತಿ ಟನ್ ಕಬ್ಬಿಗೆ ₹ 2,200 ಮುಂಗಡ ಕೊಡಿಸುವ ಭರವಸೆ ಕೊಡಲಾಗಿತ್ತು. ಆಗ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಪ್ರತಿ ಕ್ವಿಂಟಲ್‌ಗೆ ₹ 3,300 ಇತ್ತು. ಈ ಬಗೆಗೆ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರಿಗೂ ಮನವರಿಕೆ ಮಾಡಿಕೊಡಲಾಗಿತ್ತು’ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಭಾಲ್ಕಿಯ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆ, ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆ, ಜನವಾಡದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ, ಹಳ್ಳಿಖೇಡದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ, ಬರೂರದ ಭವಾನಿ ಸಕ್ಕರೆ ಕಾರ್ಖಾನೆ, ಮನ್ನಾಎಖ್ಖೆಳ್ಳಿಯ ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರು, ‘ಸಕ್ಕರೆ ಬೆಲೆ ಪ್ರತಿ ಕ್ವಿಂಟಲ್‌ಗೆ ₹ 2,900 ಇದೆ. ಉತ್ಪಾದನಾ ವೆಚ್ಚ ಜಾಸ್ತಿ ಆಗಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿದ ಎಫ್‍ಆರ್‌ಪಿ ದರ ₹ 2,550 ಎಕ್ಸ್ ಗೇಟ್ ದರವಾಗಿದ್ದು, ಪಾವತಿಸುವುದು ಕಷ್ಟ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಷಣ್ಮುಖ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ದೇವರಾಜ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.