ADVERTISEMENT

ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2013, 10:06 IST
Last Updated 19 ಜೂನ್ 2013, 10:06 IST

ಬೀದರ್: ಅಗತ್ಯ  ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಏರಿಕೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.

ಜಿಲ್ಲಾ ಬಿಜೆಪಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ಘೋಷಣೆ ಹಾಕಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರದಲ್ಲಿ ದೂರಿದ್ದಾರೆ.

ಪೆಟ್ರೋಲ್ ಜೊತೆಗೆ ರಾಜ್ಯದಲ್ಲಿ ಬಸ್ ಪ್ರಯಾಣ ದರದಲ್ಲಿಯೂ ಏರಿಕೆ ಮಾಡಿರುವುದು ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಿದೆ ಎಂದು ಆಪಾದಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ವಾಪಸು ಪಡೆಯಬೇಕು. ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಚುರುಕುಗೊಳಿಸಬೇಕು. ರಾಜ್ಯದಲ್ಲಿ ಹೆಚ್ಚಳ ಮಾಡಿರುವ ಬಸ್ ಪ್ರಯಾಣ ದರ ಹಿಂಪಡೆಯಬೇಕು.

ಚುನಾವಣೆ ವೇಳೆ ನೀಡಿದ್ದ ವಾಗ್ದಾನದಂತೆ ಪಡಿತರ ವ್ಯವಸ್ಥೆಯಡಿ 1 ರೂಪಾಯಿಗೆ ಕೆ.ಜಿ.ಯಂತೆ 30 ಕೆ.ಜಿ. ಅಕ್ಕಿ ವಿತರಿಸಬೇಕು. ಹಾಗೂ ಅಗ್ಗದ ದರದ ಮದ್ಯ ಮಾರಾಟ ಪ್ರಸ್ತಾವ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಾಥರಾವ್ ಮಲ್ಕಾಪುರೆ, ಮಾಜಿ ಶಾಸಕ ರಾಜೇಂದ್ರ ವರ್ಮಾ, ಜಿಲ್ಲಾ ಅಧ್ಯಕ್ಷ ಶಿವರಾಜ ಗಂದಗೆ, ಪ್ರಧಾನ ಕಾರ್ಯದರ್ಶಿ ಬಾಬುವಾಲಿ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಾಬುರಾವ್ ಮದಕಟ್ಟಿ, ಪ್ರಮುಖರಾದ ರೇವಣಸಿದ್ಧಪ್ಪ ಜಲಾದೆ, ಎನ್.ಆರ್. ವರ್ಮಾ, ಬಸವರಾಜ ಪವಾರ್, ಶಶಿಧರ ಹೊಸಳ್ಳಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.