ADVERTISEMENT

ಬರಗಾಲ ಪೀಡಿತ ತಾಲ್ಲೂಕು ಘೋಷಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2011, 7:00 IST
Last Updated 3 ಅಕ್ಟೋಬರ್ 2011, 7:00 IST

ಜೇವರ್ಗಿ: ಸಮರ್ಪಕ ಮಳೆ ಬಾರದೇ  ರೈತರು ಸಂಕಷ್ಟದಲ್ಲಿದ್ದಾರೆ. ಜೇವರ್ಗಿ ತಾಲ್ಲೂಕನ್ನು ಕೂಡಲೇ ಬರಗಾಲ ಪೀಡಿತ ಎಂದು ಘೋಷಿಸುವಂತೆ ತಾವು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಮನವಿ ಮಾಡಿರುವುದಾಗಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

ಭಾನುವಾರ ತಾಲ್ಲೂಕಿನ ಗಂವ್ಹಾರ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಸಂಪೂರ್ಣ ಸ್ವಚ್ಛತಾ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು. ಅ.3ರಂದು ಸಿಂ ಸಭೆ ಕರೆದಿದ್ದು, ಆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್ ಭಾಗವಹಿಸಿ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ.  ಮಳೆ ಕಡಿಮೆಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕರು ಭರವಸೆ ನೀಡಿದರು.

ಗಂವ್ಹಾರ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ. ಗ್ರಾಮಗಳು ಸ್ವಚ್ಛವಾಗಿದ್ದಾಗ ಮಾತ್ರ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯವೆಂದರು.

ಮುಖ್ಯ ಅತಿಥಿಗಳಾಗಿ ಆಂದೋಲಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಗುರುಲಿಂಗಪ್ಪಗೌಡ ಮಾಲಿಪಾಟೀಲ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪಾರ್ವತಿ ಸ್ಥಾವರಮಠ, ಹರಿಶ್ಚಂದ್ರ ನಾಯಕ, ಬಾಪುಗೌಡ ಪೊಲೀಸ್ ಪಾಟೀಲ ಮತ್ತಿತರರು ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕಲ್ಯಾಣಕುಮಾರ ಗಂವ್ಹಾರ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.