ಬೀದರ್: ತಾಲ್ಲೂಕಿನ ಅಮಲಾಪುರ ಗ್ರಾಮ ಪಂಚಾಯಿತಿಯಲ್ಲಿ ಯಂತ್ರ ಬಳಸಿ ಉದ್ಯೋಗ ಖಾತರಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಮಹಿಳೆಯರು ನಗರದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಕಾರ್ಮಿಕರಿಗೆ ಉದ್ಯೋಗ ಒದಗಿಸುವುದಕ್ಕಾಗಿ ಖಾತರಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಿರಿಯ ಎಂಜಿನಿಯರ್ ಸೇರಿಕೊಂಡು ರಾತ್ರೋರಾತ್ರಿ ಅರಣ್ಯ ಪ್ರದೇಶದಲ್ಲಿ ಗೋಕಟ್ಟಾ ಹಾಗೂ ಚೆಕ್‌ಡ್ಯಾಂ ಕಾಮಗಾರಿ ಪ್ರಾರಂಭಿಸಿದ್ದಾರೆ ಎಂದು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಗ್ರಾಮಸ್ಥರು ಈ ಬಗ್ಗೆ ಪ್ರಶ್ನಿಸಿದಾಗ ಗ್ರಾಮ ಪಂಚಾಯಿತಿ ಸದಸ್ಯರು ಯಂತ್ರ ತೆಗೆದುಕೊಂಡು ಪರಾರಿ ಆಗಿದ್ದಾರೆ ಎಂದು ಹೇಳಿದ್ದಾರೆ.ಕಳೆದ ಒಂದು ವರ್ಷದಿಂದ ಕಾರ್ಮಿಕರಿಗೆ ಕೆಲಸ ಕಲ್ಪಿಸದೇ ಬೇರೆಯವರ ಹೆಸರಿನಲ್ಲಿ ಹಣ ಎತ್ತಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೂ ಕೂಲಿ ಕಾರ್ಮಿಕರಿಗೆ ಕೆಲಸ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಂಭುಲಿಂಗ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಅರುಣ ಕುದರೆ, ಪ್ರಮುಖರಾದ ಶಂಭುಲಿಂಗ ಪೂಜಾರಿ, ನರಸಿಂಗ ಸಾಮ್ರಾಟ, ಅಬ್ದುಲ್ ಖಯುಮ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.