ಜನವಾಡ: ರಾಷ್ಟ್ರೀಯ ವಿಜ್ಞಾನ ದಿನದ ನಿಮಿತ್ತ ಜ್ಞಾನ ಕಾರಂಜಿ ಚಾರಿಟೇಬಲ್ ಟ್ರಸ್ಟ್ ಸಂಚಾಲಿತ ಬೀದರ್ ತಾಲ್ಲೂಕಿನ ಯದಲಾಪುರ ಗ್ರಾಮದ ನೈಟಿಂಗೇಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಕಲಾ ಮತ್ತು ವಿಜ್ಞಾನ ವಸ್ತುಪ್ರದರ್ಶನ ನಡೆಯಿತು.
ಸೌರಶಕ್ತಿ, ಹನಿ ನೀರಾವರಿ, ಕೈತೋಟ ಸೇರಿದಂತೆ ಸುಮಾರು 60 ಕ್ಕೂ ಹೆಚ್ಚು ಮಾದರಿಗಳು ಪ್ರದರ್ಶನದಲ್ಲಿದ್ದವು. ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಇಡಲಾಗಿದ್ದ ಮಾದರಿಗಳ ಬಗ್ಗೆ ಪಾಲಕರು, ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ಗಮನ ಸೆಳೆದರು.
ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೆ ಸಾಕಷ್ಟು ಅವಕಾಶಗಳಿದ್ದು, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉದ್ಘಾಟನೆ ನೆರವೇರಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಡಾ. ಶೈಲೇಂದ್ರ ಬೆಲ್ದಾಳೆ ನುಡಿದರು. ಭವಿಷ್ಯದಲ್ಲಿ ವಿಜ್ಞಾನಿ ಆಗಲು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡಬೇಕು. ವಿಜ್ಞಾನ ಕ್ಷೇತ್ರದ ಸಾಧಕರನ್ನು ಮಾದರಿಯನ್ನಾಗಿಸಿಕೊಳ್ಳಬೇಕು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಬಾಬುರಾವ್ ದಾನಿ ನುಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಕಲೆ, ವಿಜ್ಞಾನ, ಸಾಮಾನ್ಯಜ್ಞಾನ, ಸಾಹಿತ್ಯ, ಸಂಸ್ಕೃತಿ ಮತ್ತಿತರ ವಿಷಯ ಬಗ್ಗೆ ಅರಿವು ಮೂಡಿಸಲು ಟ್ರಸ್ಟ್‌ನಿಂದ ವಿವಿಧ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಜ್ಞಾನ ಕಾರಂಜಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಸವರಾಜ ಭರಶೆಟ್ಟಿ ತಿಳಿಸಿದರು.
ಶಿಕ್ಷಕ ದೇವಿಪ್ರಸಾದ್ ಕಲಾಲ್ ಮಾತನಾಡಿದರು. ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸುರೇಶ್ ಚನಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಸಂಜೀವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಟಿ.ಆರ್. ದೊಡ್ಡೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾ ಘಟಕದ ಪಾಶಾಸಾಬ್ ಮೂಲಿಮನಿ, ಎನ್. ಬಸವರಾಜ ಉಪಸ್ಥಿತರಿದ್ದರು. ಮುಖ್ಯಗುರು ನಾಗರಾಣಿ ಸ್ವಾಗತಿಸಿದರು. ಶಿಕ್ಷಕಿ ಸಂಗೀತಾ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.