ADVERTISEMENT

ಹಣಕಾಸಿನ ವ್ಯವಹಾರದ ಮೇಲೆ ನಿಗಾ

ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ: ಮಹಾದೇವ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 6:49 IST
Last Updated 2 ಏಪ್ರಿಲ್ 2018, 6:49 IST

ಬೀದರ್: ‘ಚುನಾವಣೆ ಆಯೋಗದ ನಿರ್ದೇಶನದಂತೆ ತೆಗೆದುಕೊಳ್ಳಬೇಕಾದ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ಪ್ರಚಾರ ಫಲಕಗಳನ್ನು ತೆಗೆಯಲು ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಎಲ್ಲ ಫಲಕಗಳನ್ನು ತೆರವುಗೊಳಿಸಲಾಗಿದೆ. ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬ್ಯಾಂಕಿನಿಂದ ಈ ಹಿಂದೆ ಆಗಿರುವ ಹಣಕಾಸಿನ ವ್ಯವಹಾರದ ಮಾಹಿತಿ ಪಡೆದುಕೊಳ್ಳಲಾಗಿದೆ. ಮತ್ತೆ ಈಗ  ಪ್ರತಿನಿತ್ಯದ ಹಣಕಾಸಿನ ವ್ಯವಹಾರದ ಮೇಲೆ ನಿಗಾ ಇಡಲಾಗಿದೆ’ ಎಂದು ತಿಳಿಸಿದರು.

‘ಪೆಟ್ರೋಲ್ ಹಾಗೂ ಡೀಸೆಲ್‌ ಬಂಕ್‌ಗಳ ಮಾಲೀಕರೊಂದಿಗೆ ಕೂಡ ಸಭೆ ನಡೆಸಲಾಗಿದೆ. ಯಾವ ವಾಹನಗಳು ಅತಿ ಹೆಚ್ಚು ಇಂಧನ ಬಳಸುತ್ತವೆಯೋ ಎಂಬುದರ ಬಗ್ಗೆ ಪ್ರತಿ ದಿನ ಮಾಹಿತಿ ನೀಡಲು ತಿಳಿಸಲಾಗಿದೆ. ಎಲ್ಲಾ ಕಡೆಗಳಲ್ಲಿ ಪ್ರಾತ್ಯಕ್ಷಿಕೆ ನಡೆಸುವ ಮೂಲಕ ಮತದಾನ ಯಂತ್ರಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ವ್ಯವಸ್ಥೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ರಾಜಕೀಯ ಪಕ್ಷಗಳ ಮುಖಂಡರಿಗೆ ಕೂಡ ತರಬೇತಿ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲೆಯ ಕಲಾವಿದ ವೈಜನಾಥ ಬಿರಾದಾರ ಅವರನ್ನು ಜಿಲ್ಲಾ ಚುನಾವಣಾ ಐಕಾನ್ ಆಗಿದ್ದಾರೆ. ಮತದಾನದ ಮಹತ್ವ ತಿಳಿಸಲು, ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಮತ ಚಲಾಯಿಸುವ ಬಗ್ಗೆ ಇಡೀ ಜಿಲ್ಲೆಯ ಜನರಲ್ಲಿ ವ್ಯಾಪಕ ಪ್ರಚಾರ ನಡೆಸುವ ನಿಟ್ಟಿನಲ್ಲಿ ಬಿರಾದಾರ ಅವರು ಜಿಲ್ಲೆಯಲ್ಲಿ ಸಂಚರಿಸಿ ಅರಿವು ಮೂಡಿಸಲಿದ್ದಾರೆ’ ಎಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.