ADVERTISEMENT

‘ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ವಹಿಸಿ’

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2014, 9:07 IST
Last Updated 3 ಮಾರ್ಚ್ 2014, 9:07 IST

ಹುಮನಾಬಾದ್‌: ಬೇಸಿಗೆಯಲ್ಲಿ ಕ್ಷೇತ್ರದ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ರಾಜಶೇಖರ ಬಿ.ಪಾಟೀಲ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ನೀರಿನ ಕೊರತೆ ಸಮಸ್ಯೆ ಸಂಬಂಧ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್‌ ಉಪ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್‌, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರಿಗೆ ಸೂಚಿಸಿದರು. ಹೈ.ಕ ಅಭಿವೃದ್ಧಿ ಯೋಜನೆ ಇನ್ನೂ ವಿವಿಧ ಯೋಜನೆ ಅಡಿಯಲ್ಲಿ ಮಂಜೂರಾದ ಅನುದಾನ ಅಭಿವೃದ್ಧಿ ಕೆಲಸಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು.

ಈ ವಿಷಯದಲ್ಲಿ ಬೇಜವಾಬ್ದಾರಿ ಪ್ರದರ್ಶಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ಎನ್‌ಇಕೆಆರ್‌ಸಿ ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ಬಹುತೇಕ ಕಡೆ ಪ್ರಯಾಣಿಕರಿಗೆ ಸಮರ್ಪಕ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುವಂತೆ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದರು.

ಹುಮನಾಬಾದ್‌ ಹಾಗೂ ಚಿಟಗುಪ್ಪ ಪುರಸಭೆಗೆ ವಿವಿಧ ಯೋಜನೆ ಅಡಿಯಲ್ಲಿ  ಬಂದ ಅನುದಾನ ಮಾಹಿತಿ ಪಡೆದು, ನನೆಗುದಿಗೆ ಬಿದ್ದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ, ಉದ್ಯೋಗ ಖಾತರಿ ಯೋಜನೆ ಸಮರ್ಪಕ ಅನುಷ್ಠಾನ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

ಅಬಕಾರಿ, ಸಮಾಜ ಕಲ್ಯಾಣ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಡಿಪಿ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಶಾಸಕರು  ಎಚ್ಚರಿಸಿದರು. ಜಿಲ್ಲಾ ಪಂಚಾಯಿತಿ ಕೃಷಿ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ವೀರಣ್ಣ ಪಾಟೀಲ, ತಹಶೀಲ್ದಾರ್‌ ತಿಪ್ಪಣ್ಣ ಸಾಲಿವಾಲೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಿ.ನಾಗಪ್ಪ, ಯೋಜನಾ ಅಧಿಕಾರಿ ನರಸಪ್ಪ ಹುಣಸಗೇರಿ ಅಲ್ಲದೇ ತಾಲ್ಲೂಕಿನ ವಿವಿಧ ಗ್ರಾಮ ಪಂಚಾ­ಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು. 

ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್‌ ಉಪ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್‌ ಸಿ.ಎಸ್‌.ಪಾಟೀಲ, ನೀರು ಪೂರೈಕೆಗೆ ವಿದ್ಯುತ್‌ ಸಮಸ್ಯೆ ಉದ್ಭವಗೊಳ್ಳದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ಮಾಣಿಕರಾವ ಪವಾರ ಅವರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.