ADVERTISEMENT

ಸೇವಾ ಭದ್ರತೆ: 25 ರಂದು ಗುತ್ತಿಗೆ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 15:25 IST
Last Updated 20 ಅಕ್ಟೋಬರ್ 2018, 15:25 IST
ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಮುಷ್ಕರದ ಪ್ರಯುಕ್ತ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ ಮನವಿ ಪತ್ರ ಸಲ್ಲಿಸಿದರು
ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಮುಷ್ಕರದ ಪ್ರಯುಕ್ತ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ ಮನವಿ ಪತ್ರ ಸಲ್ಲಿಸಿದರು   

ಬೀದರ್: ಆರೋಗ್ಯ ಇಲಾಖೆಯನ್ನು ಬಲಪಡಿಸಬೇಕು ಹಾಗೂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಅಕ್ಟೋಬರ್ 25 ರಂದು ಸಾಂಕೇತಿಕ ಮುಷ್ಕರ ಹೂಡಲಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಾಜಕುಮಾರ ಮಾಳಗೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ನಿಯೋಗದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಮಹಾಂತೇಶ
ಬೀಳಗಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ದೇಶದಾದ್ಯಂತ ನಡೆಸಲಿರುವ ಮುಷ್ಕರದ ಪ್ರಯುಕ್ತ ಜಿಲ್ಲೆಯ 480 ಕ್ಕೂ ಅಧಿಕ ಗುತ್ತಿಗೆ, ಹೊರ ಗುತ್ತಿಗೆ ನೌಕರರು ನಗರದ ಡಾ. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಅಖಿಲ ಭಾರತ ಮಟ್ಟದಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ಒಂದೇ ವೇದಿಕೆಗೆ ತರುವ ಪ್ರಯತ್ನ ಶುರುವಾಗಿದೆ. ದೇಶದ ಎಲ್ಲ ಗುತ್ತಿಗೆ ನೌಕರರ ಸಮಸ್ಯೆ ಮುಂದಿಟ್ಟುಕೊಂಡು ಅಂದು ಹೋರಾಟದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವೇದಿಕೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಪ್ರವೀಣ ಗುರುಮಿಟಕಲ್, ಸಂಚಾಲಕ ಉಮೇಶ ಬಿರಾದಾರ ನಿಯೋಗದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.