ಬೀದರ್: ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವುದಕ್ಕಾಗಿ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತರುವಂತೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಪಂಚಾಯಿತಿ ಸರ್ವಾನುಮತದ ನಿರ್ಣಯ ಅಂಗೀಕರಿಸಿತು.ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ ವಿಷಯ ಪ್ರಸ್ತಾಪಿಸಿದರು.
ಹಿಂದುಳಿದ ಈ ಭಾಗದ ವಿಕಾಸಕ್ಕೆ 371ನೇ ಕಲಂಗೆ ತಿದ್ದುಪಡಿ ತರುವುದು ಅವಶ್ಯಕವಾಗಿದೆ. ಹೀಗಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಈ ಕುರಿತು ನಿರ್ಣಯ ಅಂಗೀಕರಿಸಲು ಉದ್ದೇಶಿಸಲಾಗಿದೆ ಎಂದರು. ಆಗ ಎಲ್ಲ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿ, ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದರು.ಪ್ರಾದೇಶಿಕ ಅಸಮತೋಲನೆ ಹೋಗಲಾಡಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲು ನಿರ್ಧರಿಸಿದೆ. ಸದಸ್ಯರೊಂದಿಗೆ ಚರ್ಚಿಸಿ ನಿಯೋಗದ ಜೊತೆಗೆ ನವದೆಹಲಿಗೆ ತೆರಳುವ ಬಗ್ಗೆಯೂ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದರು.
ದೂರು ಬಂದರೆ ಕ್ರಮ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ 7 ಲಕ್ಷ ರೂಪಾಯಿ ಒದಗಿಸಲಾಗಿದೆ ಎಂದು ಹೇಳಿದರು. ನೀರಿನ ಸಮಸ್ಯೆ ಬಗ್ಗೆ ದೂರುಗಳು ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಔರಾದ್ ತಾಲ್ಲೂಕಿನ ಚಿಂತಾಕಿ, ಎಕಲಾರ, ಬಸವಕಲ್ಯಾಣ ತಾಲ್ಲೂಕಿನ ರಾಜೇಶ್ವರ, ಹಾರಕೂಡ ಮತ್ತಿತರ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದ್ದು, ಜನರು ನೀರಿಗಾಗಿ ಪರದಾಡುವ ಸ್ಥಿತಿ ಉಂಟಾಗಿದೆ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ತಾನಾಜಿ ರಾಠೋಡ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿತೇಂದ್ರ ನಾಯಕ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.