ADVERTISEMENT

ನಗರದಲ್ಲಿ 3 ಕಿ.ಮೀ. ಪಾದಚಾರಿ ಮಾರ್ಗ ನಿರ್ಮಾಣ

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್ ಭರವಸೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 15:44 IST
Last Updated 28 ನವೆಂಬರ್ 2020, 15:44 IST
ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್ ಹಾಗೂ ವಿಧಾನ ಪರಿಷತ್‌ ಸದಸ್ಯ ಶಶೀಲ್ ನಮೋಶಿ ಅವರನ್ನು ಸನ್ಮಾನಿಸಲಾಯಿತು
ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್ ಹಾಗೂ ವಿಧಾನ ಪರಿಷತ್‌ ಸದಸ್ಯ ಶಶೀಲ್ ನಮೋಶಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ನಗರದ ರಾಣಿ ಕಿತ್ತೂರು ಚೆನ್ನಮ್ಮ ವೃತ್ತ(ಮೈಲೂರು ಕ್ರಾಸ್)ದಿಂದ ಗೋರನಳ್ಳಿ ಕ್ರಾಸ್‍ನ ರಿಂಗ್ ರಸ್ತೆ ವರೆಗೆ 3 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ನಿರ್ಮಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ, ವಿವಿಧ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು ಹಾಗೂ ಉಪನ್ಯಾಸಕರ ವತಿಯಿಂದ ನಗರದ ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಹರ್ಷಗುಪ್ತ ಜಿಲ್ಲಾಧಿಕಾರಿಯಾಗಿದ್ದಾಗ ಶಿವನಗರ ಬಳಿ ಪಾದಚಾರಿ ಮಾರ್ಗ ನಿರ್ಮಿಸಿದ್ದರು. ಚೆನ್ನಮ್ಮ ವೃತ್ತದಿಂದ ರಿಂಗ್ ರಸ್ತೆವರೆಗೂ ಪಾದಚಾರಿ ಮಾರ್ಗ ನಿರ್ಮಿಸಿದರೆ ಬೆಳಿಗ್ಗೆ ಹಾಗೂ ಸಂಜೆ ವಾಯು ವಿಹಾರಕ್ಕೆ ಹೋಗುವವರಿಗೆ ಅನುಕೂಲವಾಗಲಿದೆ. ಕಾರಣ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು ಎನ್ನುವ ರಾಜೇಂದ್ರಕುಮಾರ ಗಂದಗೆ ಅವರ ಮನವಿಗೆ ಸ್ಪಂದಿಸಿ ಅವರು ಈ ಭರವಸೆ ನೀಡಿದರು.

ADVERTISEMENT

ಪಾದಚಾರಿ ಮಾರ್ಗಕ್ಕೆ ಶೀಘ್ರ ಯೋಜನೆ ತಯಾರಿಸಲಾಗುವುದು. ಮಂಡಳಿಯಿಂದ ಕಾಮಗಾರಿಗೆ ಅನುದಾನ ಒದಗಿಸಲಾಗುವುದು. ಸರ್ಕಾರಿ ನೌಕರರ ಭವನದಲ್ಲಿ ವಿವಿಧ ಮೂಲಸೌಕರ್ಯಕ್ಕೂ ಅಗತ್ಯ ಅನುದಾನ ಕಲ್ಪಿಸಲಾಗುವುದು ಎಂದು ರೇವೂರ್ ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಭೀಮಾ ನದಿಯನ್ನು ಕಾರಂಜಾ ಜಲಾಶಯಕ್ಕೆ ಜೋಡಿಸಲು ಪ್ರಯತ್ನಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಸಂಸದರು ಹಾಗೂ ಶಾಸಕರ ಸಭೆ ಕರೆದು ಚರ್ಚಿಸಿ, ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆಯಡಿ ಅಭಿವೃದ್ಧಿ, ನೇಮಕಾತಿ ಹಾಗೂ ಬಡ್ತಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಬೀದರ್ ಜಿಲ್ಲಾ ಘಟಕವು ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಅವರಿಗೆ ವಿವಿಧ ಸೌಕರ್ಯಗಳನ್ನು ದೊರಕಿಸಿಕೊಡಲು ಶ್ರಮಿಸುತ್ತಿದೆ. ಸಂಘದ ಚಟುವಟಿಕೆಗಳಿಗೆ ತಮ್ಮ ಸಹಕಾರ ಸದಾ ಇರಲಿದೆ ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಶಶೀಲ್ ನಮೋಶಿ ಅವರು, ಚುನಾವಣೆಯಲ್ಲಿ ಬೀದರ್ ಜಿಲ್ಲೆಯಿಂದಲೇ ನನಗೆ ಅಧಿಕ ಮತಗಳು ಲಭಿಸಿವೆ. ನನ್ನ ಮೊದಲ ಅನುದಾನ ಸರ್ಕಾರಿ ನೌಕರರ ಭವನದ ಕಾರ್ಯಕ್ಕೆ ಕೊಡುವೆ ಎಂದು ಹೇಳಿದರು.

ಶಿಕ್ಷಕರ ಎನ್‍ಪಿಎಸ್ ರದ್ದುಪಡಿಸಲು ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ತಿಳಿಸಿದರು.

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರನ್ನು ಸನ್ಮಾನಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಲಬುರ್ಗಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೆಂಗಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಕೆಆರ್‍ಇ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಪ್ರಕಾಶ ಮಡಿವಾಳ, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರಾಜಕುಮಾರ ಪಾಟೀಲ, ಉಪಾಧ್ಯಕ್ಷರಾದ ಬಸವರಾಜ ಜಕ್ಕಾ, ಪ್ರಭುಲಿಂಗ ತೂಗಾವೆ, ಖಜಾಂಚಿ ಅಶೋಕ ರೆಡ್ಡಿ, ಓಂಕಾರ ಮಲ್ಲಿಗೆ, ಸುಧಾಕರ್ ಶೇರಿಕಾರ, ಬಲವಂತ ರಾಠೋಡ್ ಉಪಸ್ಥಿತರಿದ್ದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಶಿವಕುಮಾರ ಬಾವಗೆ ನಿರೂಪಿಸಿದರು. ಕೇಂದ್ರ ಸಂಘದ ಸಹ ಕಾರ್ಯದರ್ಶಿ ಪ್ರೊ. ರಾಜಕುಮಾರ ಹೊಸದೊಡ್ಡೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.