ADVERTISEMENT

ಬಡ ಜನರಿಗೆ 500 ಮನೆ ಮಂಜೂರು

ಹುಮನಾಬಾದ್: ಶಾಸಕ ರಾಜಶೇಖರ ಪಾಟೀಲ ಭರವಸೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 2:15 IST
Last Updated 16 ಆಗಸ್ಟ್ 2021, 2:15 IST
ಹುಮನಾಬಾದ್ ಪಟ್ಟಣದ ತಹಸೀಲ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು
ಹುಮನಾಬಾದ್ ಪಟ್ಟಣದ ತಹಸೀಲ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು   

ಹುಮನಾಬಾದ್: ಕಾರಂಜಾ ಹಿನ್ನೀರಿನಿಂದ ಡಾಕುಳಗಿ ಸೇರಿದಂತೆ ಇತರ ಗ್ರಾಮಗಳ ಒಟ್ಟು 97 ಮನೆಗಳ ಜನರು ಸಂಕಷ್ಟದಲ್ಲಿದ್ದು, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಲಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು

ಪಟ್ಟಣದ ತಹಸೀಲ್ ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ 75ನೇ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಬರುವ ದಿನಗಳಲ್ಲಿ ಕೊಳಚೆ ಪ್ರದೇಶದ ಹಾಗೂ ಬಡ ಜನರಿಗೆ ಸೂರು ಒದಗಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ 500 ಮನೆಗಳು ಮಂಜೂರಾಗಿದ್ದು, ಟೆಂಡರ್ ಸಹ ಕರೆಯಲಾಗಿದೆ ಮತ್ತು ಇಲ್ಲಿ ಈಜು ಕೊಳ ನಿರ್ಮಿಸುವುದಕ್ಕಾಗಿ ₹2.5 ಕೋಟಿ ಮಂಜೂರಾಗಿದ್ದು, ಸ್ಥಳ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ADVERTISEMENT

ರೈತರ ಹಿತದೃಷ್ಟಿಯಿಂದ ಬಿಎಸ್‍ಎಸ್‍ಕೆ ಕಾರ್ಖಾನೆ ಆರಂಭಿಸಲು ಹಾಗೂ ಜಿಲ್ಲೆಯಲ್ಲಿನ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಬಾಕಿ ಹಣ ಒದಗಿಸಲು ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಕೊರೊನಾ ಸೇನಾನಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ತಹಸೀಲ್ದಾರ್ ನಾಗಯ್ಯ ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಕಸ್ತೂರಬಾಯಿ ಪರಸನೋರ, ಉಪಾಧ್ಯಕ್ಷೆ ಸತ್ಯವತಿ ಮಠಪತಿ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಮಾಳಶೆಟ್ಟಿ, ಉಪ ತಹಸೀಲ್ದಾರ್ ಜಯಶ್ರೀ, ಡಿವೈಎಸ್‍ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ, ತಾ.ಪಂ.ಇಒ ವೈಜಿನಾಥ ಫುಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.