ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 6:50 IST
Last Updated 13 ಜನವರಿ 2018, 6:50 IST

ಬೀದರ್‌: ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಆಕ್ಷೇಪಣೆ ಸ್ವೀಕರಿಸುವ ದಿನಾಂಕವನ್ನು ಜ.22ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ತಿಳಿಸಿದರು. 2018ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಂಡ ಯುವಕ, ಯುವತಿಯರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವವರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಂದಾಯ ಅಧಿಕಾರಿ, ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ನಗರಸಭೆ ಕಚೇರಿಗಳಲ್ಲಿ ಮತದಾರರು ಅಗತ್ಯ ಮಾಹಿತಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನೂ ಸಲ್ಲಿಸಬಹುದು ಎಂದು ತಿಳಿಸಿದರು.

ಜ.31ರಂದು ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಫೆ.28ರಂದು ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಕನ್ನಡ, ಮರಾಠಿ ಹಾಗೂ ಉರ್ದು ಭಾಷೆಯಲ್ಲಿ ಪ್ರಕಟಿಸ ಲಾಗುವುದು ಎಂದು ಹೇಳಿದರು.

ADVERTISEMENT

ಪ್ರತಿ ಮತಗಟ್ಟೆಗೆ ಬೂತ್ ಮಟ್ಟದ ಅಧಿಕಾರಿ ಹಾಗೂ 10-15 ಮತದಾನ ಕೇಂದ್ರಗಳಿಗೆ ಒಬ್ಬರಂತೆ ವಲಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದು, ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ಜ.13ರಂದು ಔರಾದ್ ಹಾಗೂ ಬೀದರ್, ಜ.14ರಂದು ಭಾಲ್ಕಿ ಮತ್ತು ಹುಮನಾಬಾದ್‌ನಲ್ಲಿ ತಾಲ್ಲೂಕು ಚುನಾವಣಾ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಮತದಾನದ ಮಹತ್ವ ತಿಳಿಸಲು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜ. 18ರಂದು ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳ ಮ್ಯಾರಾಥಾನ್ ಆಯೋಜಿಸಲಾಗಿದೆ.
ಜ.19 ರಂದು ಜಿಲ್ಲೆಯಲ್ಲಿ ಒಂದೇ ಬಾರಿಗೆ ಗ್ರಾಮ ಸಭೆಗಳನ್ನು ನಡೆಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಹಾಗೂ 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ-6 ಭರ್ತಿ ಮಾಡಿ ಆಧಾರ್‌ ಕಾರ್ಡ್‌ ನಕಲು, ತಂದೆ, ತಾಯಿ, ಸಂಬಂಧಿ ಅಥವಾ ಮನೆ ಮಾಲೀಕರ ಚುನಾವಣಾ ಗುರುತಿನ ಚೀಟಿಯ ನಕಲು ಪ್ರತಿಯೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಮದುವೆ, ಮರಣ, ವಲಸೆ ಹಾಗೂ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ನೋಂದಣಿಯಾದರೆ ಅಂತಹವರ ಹೆಸರು ತೆಗೆಯಲು ನಮೂನೆ 7ರಲ್ಲಿ ಅರ್ಜಿ ಸಲ್ಲಿಸಬೇಕು. ಹಾಲಿ ಪಟ್ಟಿಯಲ್ಲಿ ಕಾರಣಾಂತರಗಳಿಂದ ತಪ್ಪು ನಮೂದು ಆಗಿದ್ದಲ್ಲಿ ಅದನ್ನು ಸರಿಪಡಿಸಲು ನಮೂನೆ 8ರಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

2000ರ ಜನವರಿ 1ರಂದು ಜನಿಸಿದವರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಲ್ಲಿ ಅವರಿಗೆ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಗುರುತಿನ ಚೀಟಿಯ ಜತೆಗೆ ಮಿಲೇನಿಯಂ ವೋಟರ್ ಆಫ್ ಇಂಡಿಯಾ ಬಿಲ್ಲೆ ನೀಡಲಾಗುವುದು ಎಂದು ಆವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಡಿ.ಷಣ್ಮುಖ, ಚುನಾವಣಾ ಅಧಿಕಾರಿ ಶಾಂತಲಾ ಚಂದನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.