ADVERTISEMENT

‘ವೇತನ ಆಯೋಗದ ಶಿಫಾರಸು ಜಾರಿಗೊಳಿಸಿ’

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 8:59 IST
Last Updated 8 ಫೆಬ್ರುವರಿ 2018, 8:59 IST

ಬೀದರ್: ‘ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯ ನಿವಾರಿಸಲು ರಾಜ್ಯ ಸರ್ಕಾರ ಏಳನೇ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ಏಳನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು ಎನ್ನುವುದು ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದೆ. ಹೀಗಾಗಿ ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಈ ಕುರಿತು ಘೋಷಣೆ ಮಾಡಬೇಕು. ಅಗತ್ಯ ಅನುದಾನವನ್ನೂ ಒದಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ನೆರೆಯ ರಾಜ್ಯಗಳ ಸರ್ಕಾರಿ ನೌಕರರಿಗೆ ಹೋಲಿಸಿದರೂ ರಾಜ್ಯದಲ್ಲಿ ವೇತನ ಹಾಗೂ ಭತ್ಯೆ ಕಡಿಮೆ ಇದೆ. ವೇತನ ತಾರತಮ್ಯದ ಕಾರಣ ಈಗಿನ ಬೆಲೆ ಏರಿಕೆ ದಿನಮಾನಗಳಲ್ಲಿ ನೌಕರರು ಸಮಸ್ಯೆ ಎದುರಿಸಬೇಕಾಗಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು 2.80 ಲಕ್ಷ ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಅಭಿವೃದ್ಧಿ ಕಾರ್ಯ ಹಾಗೂ ಜನರ ಸಮಸ್ಯೆಗೆ ಸ್ಪಂದಿಸಲು ತೊಂದರೆಯಾಗುತ್ತಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನೇ ಮರು ಜಾರಿಗೊಳಿಸಬೇಕು. ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕ ಹಾಗೂ ಸಿಬ್ಬಂದಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ವಿಮೆ ಯೋಜನೆಯಡಿ ಆರೋಗ್ಯ ಸೇವೆ ಒದಗಿಸಬೇಕು. ಫೆ. 16 ರಂದು ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.