ADVERTISEMENT

ಅಕ್ರಮ ನೇಮಕಾತಿ ಆರೋಪ; ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಮೇ 2022, 2:56 IST
Last Updated 5 ಮೇ 2022, 2:56 IST
ಅಕ್ರಮ ನೇಮಕಾತಿ ಪ್ರಕರಣವನ್ನು ಸಮಗ್ರ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಔರಾದ್‍ನಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರಿಗೆ ಮನವಿಪತ್ರ ಸಲ್ಲಿಸಿದರು
ಅಕ್ರಮ ನೇಮಕಾತಿ ಪ್ರಕರಣವನ್ನು ಸಮಗ್ರ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಔರಾದ್‍ನಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರಿಗೆ ಮನವಿಪತ್ರ ಸಲ್ಲಿಸಿದರು   

ಬೀದರ್: ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು, ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸರ್ಕಾರ ಕೆಇಎ, ಕೆಪಿಎಸ್‍ಸಿಯಂತಹ ಸಂಸ್ಥೆಗಳಿಂದ ಹಲವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅರ್ಹರಾದವರನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತ ಬಂದಿದೆ. ಆದರೆ, ಈತ್ತೀಚಿನ ವರ್ಷಗಳಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳನ್ನು ಹತಾಶರನ್ನಾಗಿಸಿದೆ ಎಂದು ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ದೂರಿದರು.

ADVERTISEMENT

ಬೆರಳೆಣಿಕೆ ಸಂಖ್ಯೆಯ ಸರ್ಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಆದರೆ, ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮಗಳು ನಡೆಯುತ್ತಿರುವುದು ಅವರ ಕನಸಿಗೆ ತಣ್ಣೀರೆರೆಚುತ್ತಿವೆ ಎಂದರು.

ಪಿಎಸ್‍ಐ ನೇಮಕಾತಿ ಅಕ್ರಮದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸ ಬೇಕು. ಆರೋಪಿಗಳು ಎಷ್ಟೇ ದೊಡ್ಡವ ರಾ ದರೂ ಅವರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರದ ನೇಮಕಾತಿ ಪರೀಕ್ಷೆ ಗಳನ್ನು ನಿಯಮಾವಳಿ ಅನುಸಾರ ಪಾರದರ್ಶಕ, ನ್ಯಾಯಸ ಮ್ಮತವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.

ಪರಿಷತ್ ನಗರ ಘಟಕದ ಕಾರ್ಯದರ್ಶಿ ಅಂಬ್ರೇಶ ಬಿರಾದಾರ, ತಾಲ್ಲೂಕು ಸಂಚಾಲಕ ಪ್ರದೀಪ್ ರೆಡ್ಡಿ, ಶಿವಕಾಂತ ಪಾಟೀಲ, ವೀರೇಶ ರೇಕುಳಗಿ, ಉಮೇಶ ತೆಲಂಗ್, ಸುನೀಲ್, ಕಮಲಾಕರ್, ಬಸವರಾಜ, ಸಂತೋಷ, ಶ್ರೀಕಾಂತ, ಪವನಕುಮಾರ ರಾಜಶೇಖರ ಇದ್ದರು.

ಸಮಗ್ರ ತನಿಖೆಗೆ ಒತ್ತಾಯ

ಔರಾದ್: ಪಿಎಸ್‍ಐ ಹಾಗೂ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿ ಬುಧವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ, ಜಿಲ್ಲಾ ಪ್ರಮುಖ ಅಶೋಕ ಶೆಂಬೆಳಿ, ಹಾವಪ್ಪ ದ್ಯಾಡೆ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪಿಎಸ್‍ಐ ಹಾಗೂ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು ದೊಡ್ಡ ಅಪರಾಧ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಪ್ರತಿಭಟನಾ ನಿರತರು ದೂರಿದರು.

ಈಗಾಗಲೇ ಪಿಎಸ್‍ಐ ಅಕ್ರಮ ನೇಮಕದಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಹೆಸರು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷ ಹಾಗೂ ಎಷ್ಟೇ ದೊಡ್ಡ ವ್ಯಕ್ತಿ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಅಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಬೇಡಿಕೆ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.