ADVERTISEMENT

ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ಚುರುಕುಗೊಳಿಸಿ: ಸಚಿವ ಪ್ರಭು ಚವಾಣ್ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 3:14 IST
Last Updated 20 ಏಪ್ರಿಲ್ 2021, 3:14 IST
ಸಚಿವ ಚವಾಣ್
ಸಚಿವ ಚವಾಣ್   

ಔರಾದ್: ‘ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡುವಂತೆ’ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೂಚನೆ ನೀಡಿದ್ದಾರೆ.

‘ಜನರ ಜೀವ ಉಳಿಸುವುದು ಸರ್ಕಾರ ಹಾಗೂ ಆಡಳಿತದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಹಾಗೂ ಅಗತ್ಯ ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ನಿತ್ಯ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿರುವುದರಿಂದ ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ತೆರೆಯಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ಎಲ್ಲಿಯೂ ವೈದ್ಯಕೀಯ ಸಿಬ್ಬಂದಿ ಕೊರತೆ ಬೀಳದಂತೆ ಎಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಗಡಿ ಭಾಗದ ಚೆಕ್‍ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ತಪಾಸಣೆ ಮಾಡಬೇಕು. ಜನ ಗುಂಪಾಗಿ ಸೇರುವುದರ ಮೇಲೆ ನಿಗಾ ವಹಿಸಬೇಕು. ಸರ್ಕಾರದ ಆದೇಶದಂತೆ ಸಂತೆ, ಜಾತ್ರೆ ನಿಷೇಧದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು. ಇದಕ್ಕಾಗಿ ಪೊಲೀಸರು ಹೆಚ್ಚಿನ ನಿಗಾವಹಿಸಿ ಕೆಲಸ ಮಾಡಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

‘ಜನ ತಮ್ಮ ಹಾಗೂ ತಮ್ಮ ಕುಟುಂಬದ ಸುರಕ್ಷತೆಗಾಗಿ ಕಾಳಜಿ ವಹಿಸಬೇಕು. ಮಾಸ್ಕ್ ಇಲ್ಲದೆ ಹೊರಗೆ ಬರಬಾರದು. ಸ್ಯಾನಿಟೈಸರ್ ಬಳಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

‘ಜನ ಕೋವಿಡ್ ಲಸಿಕೆ ತೆಗೆದು ಕೊಳ್ಳುವಲ್ಲಿ ಹಿಂದೇಟು ಹಾಕುವುದು ಸರಿಯಲ್ಲ. 45 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳ ಬೇಕು. ಈ ವಿಷಯದಲ್ಲಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದು’ ಎಂದು ಅವರು ಸಲಹೆ ನೀಡಿದ್ದಾರೆ.

ಹೋಂ ಕ್ವಾರಂಟೈನ್‌ನಲ್ಲಿ ಚವಾಣ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿ ಬಂದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೋಂ ಕ್ವಾರಂಟೈನ್ ಇದ್ದಾರೆ.

‘ಈಚೆಗೆ ಬಸವಕಲ್ಯಾಣ ಉಪಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಜತೆ ಸಚಿವರು ಹಾಗೂ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು. ನನಗೆ ರೋಗ ಲಕ್ಷಣಗಳಿಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇದ್ದೇನೆ. ಮಂಗಳವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದು, ಕೆಲ ದಿನಗಳ ಕಾಲ ಸಾರ್ವಜನಿಕರು ಹಾಗೂ ಕಾರ್ಯಕರ್ತರು ನನ್ನ ಭೇಟಿಗೆ ಬರಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.