ಬೀದರ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಸಕಾರಾತ್ಮಕ ಕ್ರಮ ಕೈಗೊಳ್ಳುವುದಾಗಿ ಸಕ್ಕರೆ ಸಚಿವ ಶಿವರಾಜ ಹೆಬ್ಬಾರ್ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ವಿಶೇಷ ಸಭೆಯಲ್ಲಿ ಬೀದರ್ ಸಹಕಾರ ಸಕ್ಕರೆ ಪುನರಾರಂಭಿಸಲು ಇರುವ ತೊಡಕುಗಳ ನಿವಾರಣೆ ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಈ ಇಬ್ಬರೂ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಕಾರ್ಖಾನೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಖಾನೆಯನ್ನು ಸಂಕಷ್ಟದಿಂದ ಪಾರು ಮಾಡಿ ಮತ್ತೆ ಪ್ರಾರಂಭಿಸಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸದ್ಯ ಜಿಲ್ಲಾಧಿಕಾರಿ ಕಾರ್ಖಾನೆ ಆಡಳಿತಾಧಿಕಾರಿ ಆಗಿದ್ದಾರೆ. ಕೂಡಲೇ ಪಂಚಾಯಿತಿ ಮಟ್ಟದಲ್ಲಿ ಆನ್‍ಲೈನ್‍ನಲ್ಲಿ ಕಾರ್ಖಾನೆಯ ಸರ್ವ ಸದಸ್ಯರ ಸಭೆ ನಡೆಸಿ ನಿರ್ಣಯ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಕಾರ್ಖಾನೆಯನ್ನು ಲೀಸ್ ಮೇಲೆ ಕೊಡುವ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸದ ಭಗವಂತ ಖೂಬಾ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಸಕ್ಕರೆ ಆಯುಕ್ತ ಅಕ್ರಂ ಪಾಶಾ ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.