
ಬೀದರ್: ‘ಬೀದರ್ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಡ್ಜಸ್ಟ್‌ಮೆಂಟ್ ರಾಜಕಾರಣ ನಡೆಯುತ್ತಿದ್ದು, ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತರಲಾಗಿದೆ’ ಎಂದು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಹುಮನಾಬಾದ್ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ನಮ್ಮ ಪಕ್ಷದ ಕಾರ್ಯಕರ್ತರ ಕೆಲಸಗಳು ಆಗುತ್ತಿಲ್ಲ. ಬಿಜೆಪಿಯವರು ಹೇಳಿದ ಕೆಲಸಗಳು ಆಗುತ್ತಿವೆ. ನಾವೆಲ್ಲ ಇದರ ವಿರುದ್ಧ ಹೋರಾಡುತ್ತಿದ್ದೇವೆ’ ಎಂದು ಹೇಳಿದರು.
ಈಗಾಗಲೇ ಬೆಂಗಳೂರಿನಲ್ಲಿ ಎರಡು ಸಭೆಗಳನ್ನು ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಲಾಗಿದೆ. ಜಿಲ್ಲೆಯಲ್ಲಿನ ಎಲ್ಲ ಸಮಸ್ಯೆಗಳ ಕುರಿತು ವಿವರಿಸಲಾಗಿದೆ. ಜಿಲ್ಲೆಗೆ ಒಂದು ಸಮಿತಿ ಕಳಿಸಿ, ವರದಿ ತರಿಸಿಕೊಳ್ಳಲಾಗುವುದು ಎಂದು ತಿಳಿಸಿರುವುದಾಗಿ ಹೇಳಿದರು.
ಜೂ. 29ರಂದು ಮತ್ತೊಂದು ಸಭೆ ನಡೆಸಲು ನಿರ್ಧರಿಸಲಾಗಿದೆ. ಅಂದು ಎಲ್ಲರೂ ಸಭೆ ಸೇರಿ ಚರ್ಚಿಸಿ, ಮತ್ತೊಮ್ಮೆ ಶಿವಕುಮಾರ್ ಅವರನ್ನು ಭೇಟಿ ಮಾಡುತ್ತೇವೆ. ಜಿಲ್ಲೆಯಲ್ಲಿ ಸಚಿವರು ಹಾಗೂ ಶಾಸಕರ ನಡುವೆ ಒಳ ಒಪ್ಪಂದ ಆಗಿದೆ ಎಂದು ಆರೋಪಿಸಿದರು.
ಸಚಿವರಾದ ಈಶ್ವರ ಬಿ. ಖಂಡ್ರೆ ಹಾಗೂ ರಹೀಂ ಖಾನ್ ಜೊತೆ ವೈಯಕ್ತಿಕವಾಗಿ ಯಾವುದೇ ತೊಂದರೆಗಳಿಲ್ಲ. ಆದರೆ ಬೀದರ್ ಜಿಲ್ಲೆಯಲ್ಲಿ ನಿಷ್ಠಾವಂತ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ. ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ತಿಳಿಸಿದ್ದು ಸ್ವಲ್ಪ ದಿನ ಕಾಯಿರಿ ಅಂತ ಅಧ್ಯಕ್ಷರು ಹೇಳಿದ್ದಾರೆ.–ರಾಜಶೇಖರ ಪಾಟೀಲ, ಹುಮನಾಬಾದ್ ಕಾಂಗ್ರೆಸ್ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.