
ಬೀದರ್: ಗಡಿ ಜಿಲ್ಲೆ ಬೀದರ್‌ಗೆ ಕೃಷಿ ಕಾಲೇಜು ಮಂಜೂರು ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಜಿಲ್ಲಾ ಘಟಕ ಆಗ್ರಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿಗೆ ಸಲ್ಲಿಸಿ ಒತ್ತಾಯಿಸಿತು.
ಬೀದರ್ ಜಿಲ್ಲೆಯಲ್ಲಿ ಶೇ 60ಕ್ಕಿಂತ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಕೃಷಿ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ರೈತ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ತೊಂದರೆಯಾಗುತ್ತಿದೆ ಎಂದು ತಿಳಿಸಿದೆ.
ಜನವಾಡದಲ್ಲಿ ಈಗಾಗಲೇ ಕೃಷಿ ಸಂಶೋಧನಾ ಕೇಂದ್ರ ಇದ್ದು, ಅದೇ ಸ್ಥಳದಲ್ಲಿ ಕೃಷಿ ಕಾಲೇಜು ಸ್ಥಾಪಿಸಿದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮತ್ತು ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಈ ವಿಷಯವನ್ನು ಮಂಡಿಸಿ ಕೃಷಿ ಕಾಲೇಜು ಮಂಜೂರು ಮಾಡಬೇಕೆಂದು ಒತ್ತಾಯಿಸಿದೆ.
ಪಕ್ಷದ ಅಧ್ಯಕ್ಷ ಸಿದ್ದು ಫುಲಾರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ಜಾವಿದ್, ಉಪಾಧ್ಯಕ್ಷರಾದ ರಾಜಕುಮಾರ್ ಎನ್. ಪಾಟೀಲ್, ಶೇಖ್ ನವಾಜ್, ಕಂಟೆಪ್ಪ ಗುಪ್ತಾ, ಶಿವಗೌಡ, ರಾಮು, ಜಮೀಲ್ ಖಾದ್ರಿ, ನಬಿ ಅಲಿಯಂಬರ್ ಇನ್ನಿತತರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.