ಬೀದರ್: ‘ರಾಜ್ಯ ಸರ್ಕಾರವು ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಧಿಕಾರಿಗಳಿಗೆ ಮುಂಬಡ್ತಿ ನೀಡದೆ ಅನ್ಯಾಯ ಮಾಡುತ್ತಿದೆ’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು.
ನಗರದಲ್ಲಿ ಬುಧವಾರ ನಡೆದ ಬಹುಜನ ಸಮಾಜ ಪಕ್ಷದ ಜಿಲ್ಲಾಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ಅಧಿಕಾರಿಗಳ ವಿರುದ್ಧ ಅಧಿಕಾರ ಚಲಾಯಿಸುತ್ತಿದ್ದಾರೆ’ ಎಂದು ಆಪಾದಿಸಿದರು.
‘ಎಸ್‌ಸಿ/ ಎಸ್‌ಟಿಗಳ ಶೇ 90ರಷ್ಟು ಮತ ಪಡೆದು ಬಹುಮತದಿಂದ ಸರ್ಕಾರ ರಚನೆ ಆಗಿದೆ. ದಲಿತರ ಮತ ಪಡೆದ ಸಿದ್ದರಾಮಯ್ಯ ಭಾಷಣಕ್ಕೆ ಮಾತ್ರ ದಲಿತರನ್ನು ಸೀಮಿತ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಹೊರತುಪಡಿಸಿ ಎಲ್ಲಿಯೂ ಒಬ್ಬರೂ ಎಸ್‌ಸಿ, ಎಸ್‌ಟಿ ಜಿಲ್ಲಾಧಿಕಾರಿ ಇಲ್ಲ. ದಲಿತರಿಗೆ ಜಿಲ್ಲಾಧಿಕಾರಿ ಆಗಿ ಅಧಿಕಾರ ಪಡೆಯುವ ಅರ್ಹತೆ ಇಲ್ಲವೇ’ ಎಂದು ಪ್ರಶ್ನಿಸಿದರು.
‘ದಲಿತರ ಪರ ಎನ್ನುವುದಕ್ಕೆ ಮುಖ್ಯಮಂತ್ರಿಯವರಿಗೆ ಯಾವುದೇ ನೈತಿಕತೆ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ಮೌನ ವಹಿಸಿರುವುದು ಸರಿಯಲ್ಲ’ ಎಂದರು.
‘ಸಾಮಾನ್ಯ ಕೆಟಗರಿಯ 288 ಜನರನ್ನು ಪದವಿ ಪೂರ್ವ ಕಾಲೇಜಿಗೆ ಪ್ರಾಂಶುಪಾಲರಾಗಿ ನೇಮಕ ಮಾಡಲಾಗಿದೆ. ಇತರೆ ಇಲಾಖೆಗಳಲ್ಲೂ ಪರಿಶಿಷ್ಟರಿಗೆ ಅನ್ಯಾಯವಾಗಿದೆ. ಡಾ.ಜಿ. ಪರಮೇಶ್ವರ್ ಅವರು ದಲಿತರಾಗಿದ್ದರೂ ಕೂಡ ಪರಿಶಿಷ್ಟರಿಗೆ ಪೊಲೀಸ್ ಇಲಾಖೆಯ ವಿವಿಧ ವೃಂದಗಳಲ್ಲಿ ಬಡ್ತಿ ನೀಡುವಾಗ ಅನ್ಯಾಯವಾಗಿದೆ’ ಎಂದು ಆರೋಪಿಸಿದರು.
ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್ ಮಾತನಾಡಿ, ಅಹಿಂದ, ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಹುಜನ ಸಮಾಜ ಪಕ್ಷದಿಂದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ’ ಎಂದರು.
ಪಕ್ಷದ ಕೋರ್ ಸಮಿತಿಯ ಅಥರ್ ಸಿಂಗ್ ರಾವ್, ಕಲ್ಲಪ್ಪ ಆರ್. ತೊರವಿ, ರಾಜ್ಯ ಉಸ್ತುವಾರಿ ಗಂಗಾಧರ್ ಬಹುಜನ್, ಪ್ರಮುಖರಾದ ಎಲ್.ಆರ್. ಭೋಸ್ಲೆ, ಮಹಾದೇವ ಧನ್ನಿ, ಅಶೋಕ್ ಮಂಠಾಳಕರ್, ಶಕ್ತಿಕಾಂತ ಭಾವಿದೊಡ್ಡಿ, ಅಂಬಾದಾಸ್ ಚಕ್ರವರ್ತಿ, ಮಹೇಶ್ ಬೋಲಾ, ಉತ್ತಮ್ ಸುತಾರ, ಜಾಫರ್ ಖುರೇಷಿ, ಸಚಿನ್ ಗಿರಿ, ಜಿಲ್ಲಾಧ್ಯಕ್ಷ ಕಪಿಲ್ ಗೋಡಬೊಲೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.