ADVERTISEMENT

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಪ್ರೋತ್ಸಾಹ ಧನ ₹ 12 ಸಾವಿರಕ್ಕೆ ಹೆಚ್ಚಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 15:04 IST
Last Updated 22 ಸೆಪ್ಟೆಂಬರ್ 2020, 15:04 IST
ಪ್ರೋತ್ಸಾಹ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಘೋಷಣೆ ಕೂಗಿದರು
ಪ್ರೋತ್ಸಾಹ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಘೋಷಣೆ ಕೂಗಿದರು   

ಬೀದರ್: ಪ್ರೋತ್ಸಾಹ ಧನವನ್ನು ₹ 12 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯ ಯೋಜನೆಗಳ ಸಮರ್ಪಕ ಜಾರಿಗೆ ನೆರವಾಗುತ್ತ ಬಂದಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅವಿತರ ಶ್ರಮಿಸುತ್ತಿದ್ದಾರೆ. ಆದರೆ, ಅವರಿಗೆ ದೊರೆಯುತ್ತಿರುವ ಪ್ರೋತ್ಸಾಹ ಧನ ಮಾತ್ರ ತೀರಾ ಕಡಿಮೆಯಾಗಿದೆ ಎಂದು ಅಳಲು ತೋಡಿಕೊಂಡರು.

ADVERTISEMENT

ಈಗಾಗಲೇ ಭರವಸೆ ನೀಡಿದಂತೆ ಸರ್ಕಾರ ಮಾಸಿಕ ₹ 12 ಸಾವಿರ ಪ್ರೋತ್ಸಾಹ ಧನ ಕೊಡಬೇಕು. ಮೇಲಿಂದ ಮೇಲೆ ಆರೋಗ್ಯ ತಪಾಸಣೆ ಮಾಡಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಹಾಗೂ ಸ್ಯಾನಿಟೈಸರ್ ಸರಿಯಾಗಿ ನೀಡಬೇಕು. ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಬಾಕಿ ಉಳಿದ ಆಶಾ ಕಾರ್ಯಕರ್ತೆಯರಿಗೂ ಈಗಾಗಲೇ ಘೋಷಿಸಿದ ₹ 3 ಸಾವಿರ ವಿಶೇಷ ಪ್ರೋತ್ಸಾಹ ಧನ ಒದಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ನಾಡಗೌಡ, ಕಾರ್ಯದರ್ಶಿ ರತ್ನಮ್ಮ, ಗೋದಾವರಿ, ಪಂಚಶೀಲ, ಮೀನಾಕುಮಾರಿ, ಜಯಶ್ರೀ ಶಿಲಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.