ADVERTISEMENT

ಹಲ್ಲೆ ಆರೋಪ: ಬ್ರಿಮ್ಸ್ ಶುಶ್ರೂಷಾ ಅಧಿಕಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2020, 16:52 IST
Last Updated 18 ಜುಲೈ 2020, 16:52 IST
ಬೀದರ್‌ನ ಬ್ರಿಮ್ಸ್‌ ಬೋಧಕ ಆಸ್ಪತ್ರೆ ಆವರಣದಲ್ಲಿ ಶುಶ್ರೂಷಾ ಅಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು
ಬೀದರ್‌ನ ಬ್ರಿಮ್ಸ್‌ ಬೋಧಕ ಆಸ್ಪತ್ರೆ ಆವರಣದಲ್ಲಿ ಶುಶ್ರೂಷಾ ಅಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು   

ಬೀದರ್‌: ಕೋವಿಡ್‌ ಆಸ್ಪತ್ರೆಯಲ್ಲಿ ಶುಶ್ರೂಷಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ರೋಗಿಯ ಸಂಬಂಧಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿ ಶುಶ್ರೂಷಾ ಅಧಿಕಾರಿಗಳು ಇಲ್ಲಿಯ ಬ್ರಿಮ್ಸ್‌ ಬೋಧಕ ಆಸ್ಪತ್ರೆ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ರೋಗಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಮಾತ್ರೆಗಳನ್ನು ದೂರದಿಂದ ಎಸೆಯಲಾಗುತ್ತಿದೆ ಎಂದು ಆರೋಪಿಸಿ ರೋಗಿಯ ಸಂಬಂಧಿಯೊಬ್ಬರು ಆಸ್ಪತ್ರೆಯ ಶುಶ್ರೂಷಾ ಅಧಿಕಾರಿಯೊಬ್ಬರನ್ನು ತಳ್ಳಾಡಿದ್ದರಿಂದ ಕೆಲ ಹೊತ್ತು ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು.

ಕೋವಿಡ್‌ ರೋಗಿಗಳನ್ನು ನೋಡಿಕೊಳ್ಳುತ್ತಿರುವ ಶುಶ್ರೂಷಾ ಅಧಿಕಾರಿಗಳು ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ಮಾಡಲು ಶುರು ಮಾಡಿದರು. ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬುತ್ತಿದ್ದಂತೆಯೇ ಇನ್ನುಳಿದ ಸಿಬ್ಬಂದಿಯೂ ಪ್ರತಿಭಟನೆಯಲ್ಲಿ ಭಾಗವಹಿಸಿದರು. ‘ನಮಗೆ ರಕ್ಷಣೆ ಕೊಡಬೇಕು’ ಎಂದು ಒತ್ತಾಯಿಸಿ ಶುಶ್ರೂಷಾ ಅಧಿಕಾರಿಗಳು ಘೋಷಣೆಗಳನ್ನು ಕೂಗಿದರು.

ADVERTISEMENT

ನ್ಯೂಟೌನ್‌ ಹಾಗೂ ಟೌನ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಬಿಗಿ ಬಂದೋಬಸ್ತ್‌ ಒದಗಿಸಿದರು. ನಂತರ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಶುಶ್ರೂಷಾ ಅಧಿಕಾರಿಗಳು ಪ್ರತಿಭಟನೆಯನ್ನು ಅಂತ್ಯಗೊಳಿಸಿದರು.

‘ರೋಗಿಯ ಸಂಬಂಧಿಯೊಬ್ಬರು ಸರಿಯಾಗಿ ಚಿಕಿತ್ಸೆ ದೊರಕುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಶುಶ್ರೂಷಾ ಅಧಿಕಾರಿಯೊಬ್ಬರನ್ನು ತಳ್ಳಾಡಿದ್ದಾರೆ. ಯಾರ ಮೇಲೂ ಹಲ್ಲೆ ನಡೆಸಿಲ್ಲ. ಆರೋಗ್ಯ ಸಿಬ್ಬಂದಿಯ ರಕ್ಷಣೆಗೆ ಆದ್ಯತೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.