ADVERTISEMENT

ಔರಾದ್: 30 ಹೆಚ್ಚುವರಿ ಹಾಸಿಗೆ ವ್ಯವಸ್ಥೆ

ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 4:53 IST
Last Updated 22 ಏಪ್ರಿಲ್ 2021, 4:53 IST
ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಕೇರಬಾ ಪವಾರ್ ಭೇಟಿ ನೀಡಿ ಪರಿಶೀಲಿಸಿದರು. ಉಪಾಧ್ಯಕ್ಷ ಸಂತೋಷ ಪೋಕಲವಾರ, ಆಡಳಿತ ವೈದ್ಯಾಧಿಕಾರಿ ಡಾ. ಸಿದ್ಧಾರ್ಥ ಇದ್ದರು
ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಕೇರಬಾ ಪವಾರ್ ಭೇಟಿ ನೀಡಿ ಪರಿಶೀಲಿಸಿದರು. ಉಪಾಧ್ಯಕ್ಷ ಸಂತೋಷ ಪೋಕಲವಾರ, ಆಡಳಿತ ವೈದ್ಯಾಧಿಕಾರಿ ಡಾ. ಸಿದ್ಧಾರ್ಥ ಇದ್ದರು   

ಔರಾದ್: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಬೀದರ್ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಆಯಾ ತಾಲ್ಲೂಕಿನ ಆಸ್ಪತ್ರೆಯಲ್ಲೂ ಕೋವಿಡ್ ಸೋಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ 30 ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ.

‘ಇಲ್ಲಿ ಆಕ್ಷಿಜನ್ ವ್ಯವಸ್ಥೆ ಇದೆ. ಸೋಂಕಿತರಿಗೆ ಔಷಧ ವ್ಯವಸ್ಥೆಯೂ ಮಾಡಿಕೊಳ್ಳಲಾಗಿದೆ’ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಸಿದ್ಧಾರ್ಥ ತಿಳಿಸಿದ್ದಾರೆ.

ADVERTISEMENT

‘ಜಿಲ್ಲಾಡಳಿತದ ಆದೇಶದ ಮೇರೆಗೆ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 80 ಹಾಸಿಗೆಯ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ. ಮನೆಯಲ್ಲಿ ಸೂಕ್ತ ಸ್ಥಳಾವಕಾಶ ಇಲ್ಲದವರು ಈ ಆರೈಕೆ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಯ್ಯ ಸ್ವಾಮಿ ತಿಳಿಸಿದ್ದಾರೆ.

‘ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಕಾರ್ಯದಲ್ಲಿ ಇಲಾಖೆ ಸಿಬ್ಬಂದಿ ತಮಗೆ ವಹಿಸಿದ ಕೆಲಸ ಬಹಳ ಕಾಳಜಿಯಿಂದ ಮಾಡಬೇಕು. ಜನರ ಜೀವ ಉಳಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ’ ಎಂದು ಅವರು ಹೇಳಿದ್ದಾರೆ.

ನಿಯಮ ಪಾಲನೆಗೆ ಅಧ್ಯಕ್ಷರ ಮನವಿ

ಔರಾದ್: ‘ಜನರು ಕೋವಿಡ್ ನಿಯಮ ಪಾಲಿಸಿ ತಮ್ಮ ಹಾಗೂ ತಮ್ಮ ಕುಟುಂಬದ ಜೀವನ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಕೇರಬಾ ಪವಾರ್ ಮನವಿ ಮಾಡಿದರು.

ಬುಧವಾರ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಅವರು, ‘ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರನ್ನು ಸರಿಯಾಗಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಆಕ್ಸಿಜನ್ ಹಾಗೂ ಔಷಧಿ ಕೊರತೆ ಆಗದಂತೆ ನಿಗಾವಹಿಸಬೇಕು’ ಎಂದು ಸೂಚಿಸಿದರು.

‘ಜನ ಮಾಸ್ಕ್ ಇಲ್ಲದೆ ಮನೆಯಿಂದ ಹೊರಗಡೆ ಬರಬಾರದು. ಆಗಾಗ ಸ್ಯಾನಿಟೈಸರ್ ಬಳಸಬೇಕು. 45 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇದೇ ವೇಳೆ ಅಧ್ಯಕ್ಷರು ಕೋವಿಡ್ ಲಸಿಕೆ ಪಡೆದುಕೊಂಡರು.

‘ಔರಾದ್ ಪಟ್ಟಣದ ಜನ ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಇದು ಸರಿಯಲ್ಲ. ಕೋವಿಡ್ ವಿರುದ್ಧ ಹೋರಾಡಲು ಲಸಿಕೆ ಪರಿಣಾಮಕಾರಿಯಾಗಿದೆ. ಹೀಗಾಗಿ ತಮ್ಮ ಮನೆಯಲ್ಲಿನ ಹಿರಿಯರಿಗೆ ಮೊದಲು ಲಸಿಕೆ ಕೊಡಿಸಿ’ ಎಂದು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ ಮನವಿ ಮಾಡಿದರು.

ಧುರೀಣ ಕೇರಬಾ ಪವಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.