ADVERTISEMENT

ಬಾಬೂಜಿ ಆದರ್ಶ ಸರ್ವಕಾಲಕ್ಕೂ ಮಾದರಿ: ಶಾಸಕ ರಹೀಂ ಖಾನ್‌ ಹೇಳಿಕೆ

ಶಾಸಕ ರಹೀಂ ಖಾನ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 13:02 IST
Last Updated 5 ಏಪ್ರಿಲ್ 2022, 13:02 IST
ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ ಕಾರ್ಯಕ್ರಮವನ್ನು ಶಾಸಕ ರಹೀಂ ಖಾನ್‌ ಉದ್ಘಾಟಿಸಿದರು
ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ ಕಾರ್ಯಕ್ರಮವನ್ನು ಶಾಸಕ ರಹೀಂ ಖಾನ್‌ ಉದ್ಘಾಟಿಸಿದರು   

ಬೀದರ್‌: ‘ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಅವರ ಆದರ್ಶ, ಚಿಂತನೆಗಳು ಎಲ್ಲ ಕಾಲಕ್ಕೂ ಮಾದರಿಯಾಗಿವೆ’ ಎಂದು ಶಾಸಕ ರಹೀಂ ಖಾನ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಾಬೂಜಿ ಸಾಮಾಜಿಕ ಕಳಕಳಿ ಹಾಗೂ ರಾಜಕೀಯ ವಿಚಾರಧಾರೆಗಳನ್ನು ಮರೆಯಲಾಗದು. ಉಪ ಪ್ರಧಾನಿಯಾಗಿದ್ದ ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಇಂದಿನ ಯುವ ಪೀಳಿಗೆ ಅರಿತುಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅಳವಡಿಸಿಕೊಂಡು ಕೃಷಿ ಕ್ಷೇತ್ರ ಬಲಪಡಿಸಿದರು. ಆಹಾರದ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಿ

ಹಸಿರು ಕ್ರಾಂತಿಯ ಹರಿಕಾರ ಎಂದೇ ಖ್ಯಾತಿ ಪಡೆದರು’ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ನಿವೃತ್ತ ಅಧಿಕಾರಿ ಮನೋಹರ ಮಂಡೋಳಿ ಹಾಗೂ ಚಿಂತಕ ಸುಮಂತ ಕಟ್ಟಿಮನಿ ಉಪನ್ಯಾಸ ನೀಡಿದರು.

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ ಖೋಬಾಳಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂದೆ, ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ್, ಮಾರುತಿ ಬೌದ್ಧೆ, ಫರ್ನಾಂಡೀಸ್‌ ಹಿಪ್ಪಳಗಾಂವ, ರಮೇಶ ಕಟ್ಟಿತೂಗಾಂವ, ರಾಮದಾಸ ಕೆ, ರಾಜು ಕಡ್ಯಾಳ್ ಇದ್ದರು. ಚೆನ್ನಬಸವ ಹೇಡೆ ನಿರೂಪಣೆ ಮಾಡಿದರು. ದೇವಿದಾಸ ಜೋಶಿ ವಂದಿಸಿದರು.

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ರಂಗ ಮಂದಿರದ ವರೆಗೆ ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ಶಾಸಕ ರಹೀಂ ಖಾನ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಸಮುದಾಯದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.