ADVERTISEMENT

ಕೋವಿಡ್‌ ಎರಡನೇ ಅಲೆ ಬರುವ ಮೊದಲೇ ಎಚ್ಚರ ವಹಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 15:10 IST
Last Updated 5 ಡಿಸೆಂಬರ್ 2020, 15:10 IST

ಬೀದರ್‌: ‘ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ರಾಜ್ಯದಲ್ಲಿ ಎರಡನೇ ಅಲೆ ಪ್ರಾರಂಭವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಆರೋಗ್ಯಾಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಕುರಿತ ಸಭೆ ನಡೆಸಿ ಅವರು ಮಾತನಾಡಿದರು.

‘ಎಲ್ಲ ಕಾಲೇಜುಗಳಲ್ಲಿ ಆರೋಗ್ಯ ತಪಾಸಣೆ ನಡೆಯಬೇಕು. ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬೇಕಾಗಿರುವ ಆಕ್ಸಿಜನ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಲಕರಣೆಗಳನ್ನು ಪೂರೈಸಲಾಗಿದೆ. ಇನ್ನೂ ಹೆಚ್ಚಿನ ಸೌಕರ್ಯಗಳು ಅಗತ್ಯವಿದ್ದಲ್ಲಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿ ತರಿಸಿಕೊಳ್ಳಬೇಕು. ಇರುವ ಸಲಕರಣೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಹೋಮ್ ಐಸೋಲೇಶನ್‍ನಲ್ಲಿರುವ ರೋಗಿಗಳ ಮನೆಗೆ ವೈದ್ಯರು ಮತ್ತು ಸಿಬ್ಬಂದಿ ನಿಯಮಿತವಾಗಿ ಭೇಟಿ ನೀಡಿ, ಅಗತ್ಯ ಚಿಕಿತ್ಸೆ ನೀಡಬೇಕು. ಈ ವಿಷಯದಲ್ಲಿ ಯಾವುದೇ ರೀತಿಯ ಲೋಪಗಳು ಆಗದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ‘ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಜಾಗೃತಿಗಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ರಿಕವರಿ ರೇಟ್ ಶೇ 96, ಪಾಸಿಟಿವಿಟಿ ರೇಟ್- ಶೇ 0.4ರಷ್ಟಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆಗೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ್, ಬೀದರ್‌ ಹಾಗೂ ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಭುವನ್ ಪಾಟೀಲ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣಾ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.